
ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಮತ್ತು ಮೊಹಮ್ಮದ್ ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ನಡೆಸಲಿದೆ. ಕೇಂದ್ರ ಗೃಹ ಸಚಿವಾಲಯ ಭಾನುವಾರ ಈ ಸಂಬಂಧ ಆದೇಶ ಹೊರಡಿಸಿದೆ. ತಿಂಗಳ ಹಿಂದೆ ನಡೆದ ಈ ಕೊಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನತೆಯ ವಾತಾವರಣವನ್ನು ಸೃಷ್ಟಿಸಿತ್ತು. ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಎಂಟು ಜನರನ್ನು ಇಲ್ಲಿಯವರೆಗೆ ಬಂಧಿಸಲಾಗಿದೆ.
ಮಂಗಳೂರಿನಲ್ಲಿ 42 ವರ್ಷದ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆಯ ನಂತರ, ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಗ್ನವಾಯಿತು. ವಿಶ್ವ ಹಿಂದೂ ಪರಿಷತ್ ಮತ್ತು ಇತರ ಹಿಂದೂ ಸಂಘಟನೆಗಳು ಮೇ 3 ರಂದು ಜಿಲ್ಲಾದ್ಯಂತ ಬಂದ್‌ಗೆ ಕರೆ ನೀಡಿದ್ದವು. ಪ್ರತಿಭಟನೆ ವೇಳೆ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂದು ಪಟ್ಟುಹಿಡಿದಿದ್ದವು.
ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡದ ಬಿಜೆಪಿ ಸಂಸದ ಮತ್ತು ಪಕ್ಷದ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಪ್ರಕರಣದ ತನಿಖೆಯನ್ನು NIAಗೆ ವಹಿಸಬೇಕೆಂದು ಒತ್ತಾಯಿಸಿದ್ದರು. ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಕಾರ್ಯಕರ್ತರು ಈ ಕೊಲೆಯಲ್ಲಿ ಭಾಗಿಯಾಗಿರಬಹುದು ಎಂದು ಅವರು ತಮ್ಮ ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದರು.