
ಈ ಹಿಂದೆ ನಡೆಸಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ(ಜಾತಿ ಗಣತಿ)ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆ ನಡೆಸಲು ನಿರ್ಧರಿಸಿದೆ.
ಪ್ರಸ್ತುತ ಜಾತಿ ಗಣತಿ ವರದಿ 10 ವರ್ಷ ಹಳೆಯದಾಗಿರುವ ಕಾರಣ ನಿರ್ದಿಷ್ಟ ಕಾಲಮಿತಿಯಲ್ಲಿ ಮರು ಸಮೀಕ್ಷೆ ನಡೆಸಲು ಸರ್ಕಾರ ನಿರ್ಧಾರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ದೆಹಲಿಯಲ್ಲಿ ಘೋಷಿಸಿದ್ದಾರೆ.
ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಹತ್ವದ ಮಾತುಕತೆ ನಡೆಸಿ ನಡೆಸಿದರು. ಈ ವೇಳೆ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದೆ ಕಾಲ್ತುಳಿತ ಪ್ರಕರಣದ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ. ಅಲ್ಲದೆ ಜಾತಿ ಗಣತಿ ಬಗ್ಗೆಯೂ ಚರ್ಚಿಸಿದ್ದಾರೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇಂದಿನ ಸಭೆಯಲ್ಲಿ ಜಾತಿ ಗಣತಿ ಬಗ್ಗೆ ಚರ್ಚೆ ಮಾಡಿದ್ದೇವೆ. ನಿರ್ದಿಷ್ಟ ಕಾಲಮಿತಿಯಲ್ಲಿ ಮರು ಸರ್ವೇ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಬಗ್ಗೆ ಜೂನ್ 12 ರಂದು ಸಚಿವ ಸಂಪುಟ ಸಭೆಯಲ್ಲಿ ಕಾಲಮಿತಿ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ರಾಜ್ಯದ ಬೆಳವಣಿಗೆಗಳ ಬಗ್ಗೆ ರಾಹುಲ್ ಗಾಂಧಿ ಚರ್ಚೆ ಮಾಡಿದರು. ಮುಖ್ಯವಾಗಿ ಜಾತಿ ಗಣತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು. ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚೆ ಆಯಿತು. ಜಾತಿಗಣತಿ ಸಮೀಕ್ಷೆ ಮಾಡಿ 9 ರಿಂದ 10 ವರ್ಷ ಆಗಿದೆ. ಹಾಗಾಗಿ ಮತ್ತೊಮ್ಮೆ ಸಮೀಕ್ಷೆ ಮಾಡಲು ಹೇಳಿದ್ದಾರೆ. ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ. 90 ದಿನದೊಳಗೆ ಜಾತಿಗಣತಿ ಸಮೀಕ್ಷೆ ಮುಗಿಯಲಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.