 
                
ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ (59) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ರಾಜು ತಾಳಿಕೋಟೆ ಚಿತ್ರಿಕರಣದಲ್ಲಿ ಭಾಗಿಯಾಗಿದ್ದರು. ಭಾನುವಾರ ರಾತ್ರಿ ಚಿತ್ರೀಕರಣ ಮುಗಿಸಿ ರಾತ್ರಿ ವಿಶ್ರಾಂತಿಯಲ್ಲಿದ್ದಾಗ ಉಸಿರಾಟದ ಸಮಸ್ಯೆಯಾಗಿದೆ. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಕರೆ ತರಲಾಗಿತ್ತು. ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟೆ ನಗರದಲ್ಲಿ ವಾಸವಾಗಿದ್ದರು.
ರಾಜು ತಾಳಿಕೋಟೆಯವರು ಮೊದಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟೆ. ಅವರು ಕೇವಲ ನಟನಾಗಿರದೇ ತಾಳಿಕೋಟೆಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲೀಕರಾಗಿದ್ದರು.
ಅನಾರೋಗ್ಯ ಕಾರಣದಿಂದಾಗಿ ರಾಜು ತಾಳಿಕೋಟೆ ನಾಟಕ ಹಾಗೂ ಸಿನಿಮಾ ಚಟುವಟಿಕೆಗಳಿಂದ ದೂರ ಉಳಿದಿದ್ದರು. ರಾಜು ತಾಳಿಕೋಟೆಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.
ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ (2009) ಚಿತ್ರದ ಮೂಲಕ ಅವರು ಜನಪ್ರಿಯತೆ ಗಳಿಸಿದರು. ನಂತರ ‘ಪಂಚರಂಗಿ’, ‘ಮತ್ತೊಂದ್ ಮದುವೇನಾ..!’ ಮತ್ತು ‘ಮೈನಾ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು. ಬಿಗ್ ಬಾಸ್ ಸೀಸನ್ 7ರಲ್ಲಿ ಅವರು ಸ್ಪರ್ಧಿಯಾಗಿ ಭಾಗವಹಿಸಿದ್ದರು.
ಕುಡುಕನ ಪಾತ್ರಗಳಲ್ಲಿ ಮನೋಜ್ಞವಾಗಿ ಅಭಿನಯಿಸುತ್ತಿದ್ದ ಇವರ ʼಕಲಿಯುಗದ ಕುಡುಕ’, ‘ಕುಡುಕರ ಸಾಮ್ರಾಜ್ಯ’, ಮತ್ತು ‘ಅಸಲಿ ಕುಡುಕ’ ನಾಟಕಗಳು ಬಹಳ ಪ್ರಸಿದ್ಧವಾಗಿದ್ದವು. ಈ ನಾಟಕಗಳ ಆಡಿಯೋ ಕ್ಯಾಸೆಟ್‌ಗಳು ಕೂಡ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿದ್ದವು.


 
 

 
                                                         
                                                         
                                                         
                                                         
                                                         
                                                        