 
                
ಆಂಧ್ರದ ಕರ್ನೂಲ್ ಬಳಿಯ ಚಿನ್ನಟೇಕೂರು ಬಳಿ ಘನಘೋರ ದುರಂತ ಸಂಭವಿಸಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸು ಹೊತ್ತಿ ಉರಿದು ಕನಿಷ್ಠ 20ಕ್ಕೂ ಹೆಚ್ಚು ಜನ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ.
ಕಾವೇರಿ ಹೆಸರಿನ ವೋಲ್ವೋ ಬಸ್ಸಿನಲ್ಲಿ 44 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಶುಕ್ರವಾರ ಬೆಳಗಿನ ಜಾವ 3 ಗಂಟೆಯ ವೇಳೆಗೆ ವೇಗವಾಗಿ ಬಂದ ಬೈಕ್ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ನಂತರ ಬೈಕ್ ಬಸ್ಸಿನ ಕೆಳಗಡೆಯಿಂದ ಮುಂದಕ್ಕೆ ಹೋಗಿ ಇಂಧನ ಟ್ಯಾಂಕ್‌ಗೆ ಬಡಿದಿದೆ. ಹಿಂಭಾಗದಲ್ಲಿರುವ ಇಂಧನ ಟ್ಯಾಂಕ್‌ಗೆ ಬೈಕ್ ಡಿಕ್ಕಿ ಬಡಿದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ನಿಮಿಷದಲ್ಲಿ ಬೆಂಕಿ ಇಡೀ ಬಸ್ಸನ್ನು ಆವರಿಸಿದೆ.
ಬಸ್ಸಿನಲ್ಲಿದ್ದ 12 ಮಂದಿ ಪ್ರಯಾಣಿಕರು ಪಾರಾದರೂ ಕನಿಷ್ಠ 20 ಕ್ಕೂ ಅಧಿಕ ಮಂದಿ ಜೀವಂತವಾಗಿ ಸುಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಪ್ರಯಾಣಿಕರನ್ನು ಕರ್ನೂಲ್ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಪ್ರಯಾಣಿಕರು ಹೈದರಾಬಾದ್ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಆಗಮಿಸಿದವು. ರಕ್ಷಣಾ ತಂಡಗಳು ಸ್ಥಳಕ್ಕೆ ಬರುವಷ್ಟರಲ್ಲಿ ಬಸ್ಸು ಬಹುತೇಕ ಸುಟ್ಟುಹೋಗಿತ್ತು. ಈಗ ಅಧಿಕಾರಿಗಳು ಮೃತ ವ್ಯಕ್ತಿಗಳ ಗುರುತು ಪತ್ತೆ ಹಚ್ಚುವ ಕೆಲಸ ಆರಂಭಿಸಿದ್ದಾರೆ
ಸ್ಲೀಪರ್ ಕೋಚ್ ಬಸ್ಸು ಆಗಿದ್ದ ಕಾರಣ ಪ್ರಯಾಣಿಕರು ನಿದ್ದೆ ಮಾಡುತ್ತಿದ್ದರು. ಬೆಂಕಿ ಕಾಣಿಸಿದ ಕೂಡಲೇ ಕೆಲ ಪ್ರಯಾಣಿಕರು ಗಾಜನ್ನು ಒಡೆದು ಕೆಳಗೆ ಹಾರಿ ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಬಹುತೇಕರು ಹೊರಬರಲಾಗದೆ ಸುಟ್ಟು ಕರಕಲಾಗಿದ್ದಾರೆ.
ಬಸ್ಸಿನಲ್ಲಿದ್ದ ಬಹುತೇಕರು ಕರ್ನಾಟಕ ಮೂಲದವರು ಎನ್ನಲಾಗಿದೆ. ಘಟನೆ ಬಗ್ಗೆ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


 
 

 
                                                         
                                                         
                                                         
                                                         
                                                         
                                                        