ಜಿಲ್ಲಾಧಿಕಾರಿ ಮೀನಾ ನಾಗರಾಜ್
ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲಾಡಳಿತ ಮುಂಜಾಗ್ರತ ಕ್ರಮವಾಗಿ ಬುಧವಾರ (ಜುಲೈ 31) ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ಆರ್ ಪುರ, ಚಿಕ್ಕಮಗಳೂರು ಮತ್ತು ಕಳಸ ತಾಲೂಕುಗಳಲ್ಲಿ ಸಂಪೂರ್ಣ ಅಂಗನವಾಡಿ ಮತ್ತು ಶಾಲೆಗಳಿಗೆ ಹಾಗೂ ಪ.ಪೂ, ಪದವಿ ಮತ್ತು ತಾಂತ್ರಿಕ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಮಲೆನಾಡು ಭಾಗದಲ್ಲಿ ಎಡಬಿಡದೇ ಮಳೆಯಾಗುತ್ತಿದ್ದು ಮಂಗಳವಾರವೂ ಜಿಲ್ಲೆಯ ಐದು ತಾಲೂಕುಗಳಲ್ಲಿ ರಜೆ ಘೋಷಣೆ ಮಾಡಲಾಗಿತ್ತು.
ಮಳೆ ಮತ್ತು ಗಾಳಿ ರಭಸವಾಗಿ ಮುಂದುವರೆದಿದ್ದು ಅನೇಕ ಕಡೆ ರಸ್ತೆಗಳು ಕುಸಿದಿವೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 31 ರಂದು ಬುಧವಾರ ಒಂದು ದಿನಕ್ಕೆ ಅನ್ವಯವಾಗುವಂತೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.




