ನ್ಯೂಜಿಲೆಂಡ್ ಮಹಿಳಾ ತಂಡ ಚೊಚ್ಚಲ ಬಾರಿಗೆ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. 14 ವರ್ಷಗಳ ಬಳಿಕ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಫೈನಲ್ ತಲುಪಿದ್ದ ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿದೆ. ಸತತ ಎರಡನೇ ಬಾರಿ ಫೈನಲ್ ತಲುಪಿದ್ದ ದಕ್ಷಿಣ ಆಫ್ರಿಕಾ ತಂಡ 2ನೇ ಬಾರಿಗೆ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ.
ಭಾನುವಾರ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಮಹಿಳಾ ತಂಡ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 32 ರನ್‌ಗಳ ಗೆಲುವು ಸಾಧಿಸಿ, ನ್ಯೂಜಿಲೆಂಡ್ ಚೊಚ್ಚಲ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.
ಈ ಹಿಂದೆಯೂ ಎರಡು ಬಾರಿ ಫೈನಲ್ ತಲುಪಿದ್ದ ನ್ಯೂಜಿಲೆಂಡ್ ಮಹಿಳಾ ತಂಡ 2009ರಲ್ಲಿ ಇಂಗ್ಲೆಂಡ್ ವಿರುದ್ಧ, 2010ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡು ರನ್ನರ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ ಆರಂಭಿಕ ಹಿನ್ನಡೆ ಅನುಭವಿಸಿದರೂ ಸವಾಲಿನ ಮೊತ್ತ ಕಲೆಹಾಕಿತು. 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತ್ತು. ಗೆಲುವಿಗೆ 159 ರನ್ ಗುರಿ ಪಡೆದ ದಕ್ಷಿಣ ಆಫ್ರಿಕಾ ತಂಡ 9 ವಿಕೆಟ್‌ಗಳಿಗೆ 126 ರನ್‌ಗಳಷ್ಟೇ ಗಳಿಸಲು ಸಾಧ್ಯವಾಗಿ ಸೋಲು ಕಂಡಿತು.



