ತೀವ್ರ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ರಂಗೇರುತ್ತಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ಅವರು ಸೋಮವಾರ ತಮ್ಮ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂದು ಸಂಜೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ, ನನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಒಂದು ಸಾಲಿನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ರಾಜೀನಾಮೆ ಬಳಿಕ ಹೊರಟ್ಟ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿ ಯೋಗೇಶ್ವರ್, ನಾನು ಚುನಾವಣೆಗೆ ಸ್ಪರ್ಧಿಸಬೇಕಾದರೆ, ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ. ಆದ್ದರಿಂದ ರಾಜೀನಾಮೆ ಕೊಟ್ಟಿದ್ದೀನಿ. ನಾನು ಯಾವುದೇ ಪಕ್ಷ ಸೇರುವುದಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು.



