ರಾಜ್ಯದ ವಿವಿಧ ಸ್ಥಳಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರು ಚಿಕ್ಕಮಗಳೂರು ಜಿಲ್ಲಾ ಪ್ರವಾಸವನ್ನು ಒಂದು ವಾರ ಮುಂದೂಡಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜಿಲ್ಲೆಯಲ್ಲಿನ ಹಳ್ಳಿ, ಕೆರೆ, ನದಿಗಳು ತುಂಬಿ ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿದೆ. ಹಲವೆಡೆ ಭೂಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು/ಪ್ರವಾಸಿಗರು ಮುಂದಿನ ಒಂದು ವಾರದವರೆಗೆ ಅಥವಾ ಮಳೆ ಕಡಿಮೆಯಾಗುವವರೆಗೆ ಮುನ್ನೆಚ್ಚರಿಕೆ ಕ್ರಮವಹಿಸಲು ಸೂಚಿಸಲಾಗಿದೆ.
ಸಾರ್ವಜನಿಕರು/ಪ್ರವಾಸಿಗರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸಬೇಕು. ಸಾರ್ವಜನಿಕರು ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳಿ, ಕೆರೆ ಕಟ್ಟೆಗಳಿಗೆ ತೆರಳಬಾರದು ಎಂದು ಜಿಲ್ಲಾಡಳಿತ ತಿಳಿಸಿದೆ.
ಅತಿಯಾದ ಮಳೆಯಿಂದ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಚಾರಣಿಗರು ಹಾಗೂ ಹೋಂ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಟ್ರಕ್ಕಿಂಗ್ ಅನ್ನು ಒಂದು ವಾರ ಸ್ಥಗಿತಗೊಳಿಸಿ ಮುಂದೂಡಲಾಗಿದೆ.



