ಬೆಂಗಳೂರಿನಲ್ಲಿ ಸತತ ನಾಲ್ಕು ದಿನಗಳಿಂದ ಮಳೆಯಾರ್ಭಟ ಮುಂದುವರಿದಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ, ಬುಧವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ನಾಳೆ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರ್‌ಗಳಿಗೆ ರಜೆ ಇರುವುದಿಲ್ಲ ಎಂದು ಡಿಸಿ ಸ್ಪಷ್ಟಪಡಿಸಿದ್ದಾರೆ.
ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು
ಸುರಿಯುತ್ತಿರುವ ಭಾರೀ ಮಳೆಗೆ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿದಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅವಘಡದಲ್ಲಿ ಮೂವರು ಮೃತಪಟ್ಟಿದ್ದು, ಶವಗಳನ್ನು ಹೊರತೆಗೆಯಲಾಗಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.



