ರಾಜ್ಯ ರಾಜಕೀಯದ ಜಿದ್ದಾಜಿದ್ದಿನ ಕಣವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮತ್ತು ಜೆಡಿಎಸ್ ವರಿಷ್ಠ ಹೆಚ್. ಡಿ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ.
ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿಂದು ನಡೆದ ಜೆಡಿಎಸ್-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು, ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.
ಇಂದು ಬೆಳಗ್ಗೆ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿಖಿಲ್ ಸ್ಪರ್ಧೆಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿತ್ತು. ಬಳಿಕ ಯಡಿಯೂರಪ್ಪ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಮನ್ವಯ ಸಭೆ ನಡೆಸಿ ನಂತರ ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು.
ಇತ್ತ ಕಾಂಗ್ರೇಸ್ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಈ ಮೂಲಕ ನಿಖಿಲ್ ಕುಮಾರಸ್ವಾಮಿ ಮತ್ತು ಸಿ.ಪಿ. ಯೋಗೇಶ್ವರ ಅವರ ನಡುವಿನ ಹೋರಾಟಕ್ಕೆ ವೇದಿಕೆ ಸಜ್ಜಾದಂತಾಗಿದೆ.



