ಚಿಕ್ಕಮಗಳೂರು ಜಿಲ್ಲೆಯಲ್ಲಿ ಅನೇಕ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದು, ಇವುಗಳನ್ನು ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಗ್ರೀನ್ ಆರ್ಮಿ ಮುಖಂಡರು ಒತ್ತಾಯಿಸಿದ್ದಾರೆ.
ಚಿಕ್ಕಮಗಳೂರು ಎಸ್ಪಿಯವರಿಗೆ ಮನವಿ ಸಲ್ಲಿಸಿರುವ ಮುಖಂಡರು ; ಜಿಲ್ಲೆಗೆ ದಿನದಿಂದ ದಿನಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚು ಹೆಚ್ಚು ಆಗಮಿಸುತ್ತಿದ್ದು, ಜಿಲ್ಲೆಯ ಎಲ್ಲಾ ರಸ್ತೆಬದಿಗಳಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರು ಮದ್ಯಪಾನ ಮಾಡಿ ಬಾಟಲಿಗಳನ್ನು ಎಸೆಯುತ್ತಿದ್ದು, ಇದರಿಂದ ರಸ್ತೆ ಬದಿ ಮತ್ತು ರಸ್ತೆ ಪಕ್ಕದ ತೋಟಗಳು ಬಾಟಲಿಮಯವಾಗಿವೆ. ಇದಕ್ಕೆ ಕಡಿವಾಣ ಹಾಕಬೇಕು.
ಜಿಲ್ಲೆಯ ಕಾಫಿ ತೋಟಗಳಿಗೆ ಹೊರ ರಾಜ್ಯದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಇವರಲ್ಲಿ ಅಕ್ರಮ ಬಾಂಗ್ಲಾ ನುಸುಳುಕೋರರು ಇದ್ದಾರೆ. ಇಲ್ಲಿ ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಅಕ್ರಮವಾಗಿ ನೆಲೆಯೂರುತ್ತಿದ್ದಾರೆ. ಇದಕ್ಕೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ವಹಿಸಬೇಕು.
ಜಿಲ್ಲೆಯಲ್ಲಿ ಜೂಜು, ಮಟ್ಕಾ, ಮಾದಕವಸ್ತು ದಂದೆ ಅವ್ಯಾಹತವಾಗಿ ನಡೆಯುತ್ತಿದ್ದು, ಇದರಿಂದ ಯುವಜನರು ದಾರಿತಪ್ಪುತ್ತಿದ್ದಾರೆ. ಇದರ ನಿಯಂತ್ರಣಕ್ಕೆ ಕಠಿಣ ಕ್ರಮ ಜರುಗಿಸಬೇಕು.
ಜಿಲ್ಲೆಯ ಪ್ರವಾಸಿ ತಾಣಗಳಿಗೆ ತೆರಳಲು ಪ್ರವಾಸಿಗರಿಗೆ ಅನುಕೂಲವಾಗುವಂತೆ ಸೂಚನ ಫಲಕ ಮತ್ತು ನಾಮಫಲಕಗಳನ್ನು ಹಾಕಬೇಕು, ಶಾಲಾ ಕಾಲೇಜು ಸುತ್ತಮುತ್ತ ಸಿಗರೇಟ್ ಗುಟ್ಕಾ ಮಾರಾಟ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಬಿ.ಸಿ.ದಯಾಕರ್, ತುಳಸೇಗೌಡ, ಮಾಡ್ಲ ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.



