ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಭರವಸೆ ತಂದಿದೆ. ಈ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲುವಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಕಚೇರಿ/ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರವು ಸಮಾಜದ ಹಿಂದುಳಿದ ವರ್ಗದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಅವರ ಜೀವನಮಟ್ಟ ಸುಧಾರಿಸಲು ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವ ನಿಧಿ ಹಾಗೂ ಶಕ್ತಿ ಯೋಜನೆಗಳು ಸಹಕರಿಸುತ್ತಿವೆ ಎಂದರು. ಸರ್ಕಾರ ಅಭಿವೃದ್ಧಿ ಕಾರ್ಯಗಳೊಂದಿಗೆ ಗ್ಯಾರಂಟಿ ಯೋಜನೆಗಳಿಗಾಗಿ ಸುಮಾರು 52 ಸಾವಿರ ಕೋಟಿಗಳಷ್ಟು ಹಣ ಹಂಚಿಕೆ ಮಾಡಿದ್ದು ಹಣವನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ತಿಳಿಸಿದರು.
ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ ಗ್ಯಾರಂಟಿ ಯೋಜನೆಗಳಿಂದ ಜನರು ಸ್ವಾವಲಂಭಿ ಹಾಗೂ ಸಂತೋಷದ ಜೀವನವನ್ನು ನಿರ್ವಹಿಸುತ್ತಿದ್ದಾರೆ. ಜನರ ಕೈಗೆ ಹಣ ನೀಡುವುದರಿಂದ ಅಗತ್ಯತೆಗಳಿಗೆ ವ್ಯಯ ಮಾಡುತ್ತಾರೆ. ಇದರಿಂದ ವ್ಯಾಪಾರ ವಹಿವಾಟುಗಳು ಹೆಚ್ಚಾಗಿ ಸಂಪನ್ಮೂಲದ ಜೊತೆಗೆ ಉದ್ಯೋಗ ಸೃಷ್ಟಿಯಾಗುತ್ತವೆ ಎಂದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್., ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮ್ಟೆ, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಬೆಂಗಳೂರು ಹಾಗೂ ಶಾಸಕ ಟಿ.ಡಿ. ರಾಜೇಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ (ಮೈಸೂರು ವಿಭಾಗ)ದ ಉಪ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್, ಭದ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷ ಡಾ. ಅಂಶುಮಂತ್, ಕ.ರಾ. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಹೆಚ್. ಹರೀಶ್, ರಾಜ್ಯ ಪರಿಸರ ತಜ್ಞರ ಮೌಲ್ಯಮಾಪನ ಸಮಿತಿ ಸದಸ್ಯ ,ಎ.ಎನ್. ಮಹೇಶ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಜಿಲ್ಲಾ ಅಧ್ಯಕ್ಷ ಎಂ.ಸಿ. ಶಿವನಂದ ಸ್ವಾಮಿ ಉಪಸ್ಥಿತರಿದ್ದರು.


