ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು , ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಯುವಕನೊಬ್ಬ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಬಳಿಕ ಯುವಕ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದು, ಆತನ ಪತ್ತೆಗೆ ಬಲೆ ಬೀಸಿದ್ದಾರೆ.
ಪ್ರಕರಣದ ವಿವರ:
ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ನಿವಾಸಿ 17 ವರ್ಷದ ಅಪ್ರಾಪ್ತ ವಯಸ್ಸಿನ ಪಿಯುಸಿ ವಿದ್ಯಾರ್ಥಿನಿಯನ್ನು ಚಾರ್ಮಾಡಿ ಗ್ರಾಮದ ಪ್ರವೀಣ್ ಗೌಡ ಎಂಬಾತ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ಮುಖಾಂತರ ಪರಿಚಯ ಮಾಡಿಕೊಂಡಿದ್ದ. ಬಳಿಕ ಮದುವೆಯಾಗುವುದಾಗಿ ನಂಬಿಸಿದ್ದ. ವಿದ್ಯಾರ್ಥಿನಿಯು ತನ್ನನ್ನು ಪ್ರವೀಣ್ ಜೊತೆ ಮದುವೆ ಮಾಡಿಕೊಡಿ ಎಂದು ತಾಯಿಯೊಂದಿಗೆ ಹೇಳಿದ್ದಳು. ಯುವಕ ಆಕೆಯ ಜೊತೆ ಸುತ್ತಾಡಿ ಫೋಟೋ ತೆಗೆಸಿಕೊಂಡಿದ್ದ. ಬಳಿಕ ಏಕಾಏಕಿ ನಾನು ನಿನ್ನನ್ನು ಮದುವೆಯಾಗಲ್ಲ. ಸಾಯುವುದಾದರೆ ಸಾಯಿ. ಎಂದು ಹೇಳಿ ಮೋಸ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ನೊಂದ ವಿದ್ಯಾರ್ಥಿನಿ ನವೆಂಬರ್ 20 ರಂದು ರಾತ್ರಿ ಮನೆಯಲ್ಲಿ ಅಂಗಡಿಯಿಂದ ತಂದಿದ್ದ ಇಲಿಪಾಷಣ ಪೇಸ್ಟ್ ಸೇವಿಸಿದ್ದಾಳೆ ಎನ್ನಲಾಗಿದೆ.
ವಿಚಾರ ತಿಳಿದ ಕೂಡಲೇ ಆಕೆಯನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಮನೆಮಂದಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ನ.26 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿ ತಾಯಿ ಚಾರ್ಮಾಡಿ ಗ್ರಾಮದ ಮರಂಗಾಯಿ ನಿವಾಸಿ ಪ್ರವೀಣ್ (22) ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅದರಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯುವಕ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಪ್ರಕರಣದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾನೆ. ಆತನ ಬಂಧನಕ್ಕೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.



