ಅಗಲಿದ ಮಾಜಿ ಮುಖ್ಯಮಂತ್ರಿ, ಅಪರೂಪದ ರಾಜಕಾರಣಿ ಎಸ್.ಎಂ. ಕೃಷ್ಣ ಅವರು ತಮ್ಮ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಪಂಚಭೂತಗಳಲ್ಲಿ ಲೀನವಾದರು. ಕುಟುಂಬಸ್ಥರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಬುಧವಾರ ಸಂಜೆ ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿತು.
ಕಾಫಿ ಡೇ ಮಾಲೀಕ ದಿವಂಗತ ಸಿದ್ಧಾರ್ಥ್ ಹೆಗ್ಡೆ ಅವರ ಪುತ್ರ ಹಾಗೂ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ತಾತನ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಂಸದ ಡಿ.ಕೆ. ಸುರೇಶ್ ಪಾರ್ಥೀವ ಶರೀರಕ್ಕೆ ಹೆಗಲು ನೀಡಿದರು.
ವೇದಬ್ರಹ್ಮ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ 15 ವೈದಿಕರ ತಂಡದಿಂದ ವಿಧಿ-ವಿಧಾನ ಕಾರ್ಯಗಳು ನಡೆದವು. ಹಲವು ಯತಿಗಳು, ವಿವಿಧ ಮಠಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಕೃಷ್ಣ ಅವರ ಅಂತ್ಯಕ್ರಿಯೆ ಜರುಗಿತು.

ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮಿಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸಚಿವ ಚಲುವರಾಯಸ್ವಾಮಿ, ವಿಧಾನಸಭೆ ಸ್ಪೀಕರ್ ಯುಟಿ ಖಾದರ್, ಸಿಟಿ ರವಿ, ಆರ್ ಅಶೋಕ್ ಸೇರಿದಂತೆ ಅನೇಕ ಗಣ್ಯರು ಗೌರವ ನಮನ ಸಲ್ಲಿಸಿದರು.



