ಇಂದಿನ ಮಕ್ಕಳು ಇಂದಿನ ಪ್ರಜೆಗಳು. ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕಲಿಕೆಗೆ ಪ್ರೋತ್ಸಾಹಿಸಬೇಕು. ಅಕ್ಷರ ಅಭ್ಯಾಸದ ಜೊತೆಗೆ ಜೀವನ ಮೌಲ್ಯಗಳ ಕುರಿತು ಶಿಕ್ಷಣ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಸ್.ಮಂಜು ಹೇಳಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣಾ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಚಿಕ್ಕಮಗಳೂರು ತಾಲ್ಲೂಕಿನ ತೇಗೂರು ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳಿಂದ ಅಹವಾಲು ಸ್ವೀಕಾರ ಹಾಗೂ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ದೇಶದ ಆಸ್ತಿ. ಅವರಿಗೆ ಉತ್ತಮ ವಾತವರಣದಲ್ಲಿ ನೈತಿಕ ಪಾಠಗಳನ್ನು ಉಣಬಡಿಸಿ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಪ್ರತಿಯೊಬ್ಬರದ್ದಾಗಿದೆ. ಪೋಷಕರು ಹಾಗೂ ಶಿಕ್ಷಕರು ಮಕ್ಕಳ ಆತ್ಮಸ್ಥೈರ್ಯವಾಗಿದ್ದಾರೆ. ಮಕ್ಕಳ ಅವಶ್ಯಕತೆಗಳನ್ನು ಅರಿತು ಯಾವುದೇ ಮೂಲಭೂತ ಅಗತ್ಯತೆಗಳ ಕೊರತೆಯಾಗದಂತೆ ನಿಗಾವಹಿಸಿ ಅವರ ಉತ್ತಮ ಭವಿಷ್ಯಕ್ಕಾಗಿ ಶ್ರಮಿಸಬೇಕು ಎಂದರು.
ಪ್ರತಿಯೊಂದು ಮಕ್ಕಳಲ್ಲೂ ವಿನಮ್ರತೆಯ ಗುಣವಿರಬೇಕು. ತಂದೆ, ತಾಯಿ, ಶಿಕ್ಷಕರು ಹಾಗೂ ಗುರುಗಳನ್ನು ಗೌರವಯುತವಾಗಿ ಕಾಣಬೇಕು. ತಮಗೆ ಶಿಕ್ಷಣ ಹಾಗೂ ಉತ್ತಮ ಜೀವನ ರೂಪಿಸಿಕೊಡಲು ಶ್ರಮಿಸುತ್ತಿರುವ ಪ್ರತಿಯೊಬ್ಬರ ಮೇಲೆ ಕೃತಜ್ಞತಾ ಭಾವನೆಗಳ ಜೊತೆಗೆ ಸಹಾಯ ಗುಣವನ್ನು ಬೆಳೆಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಮಕ್ಕಳು ಪುಸ್ತಕಗಳಿಗಿಂತ ಮೊಬೈಲ್‌ಗಳೊಂದಿಗೆ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಕಾಲಾಹರಣ ಮಾಡುವುದಲ್ಲದೇ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಸುಮಾರು 15,572 ಮಕ್ಕಳು ಸೈಬರ್ ಅಪರಾಧಕ್ಕೆ ಒಳಗಾಗಿದ್ದಾರೆ ಇದು ಶಿಕ್ಷಣದ ಮೇಲು ದುಷ್ಪರಿಣಾಮ ಬೀರುತ್ತಿದೆ.. ರಾಜ್ಯಾದ್ಯಂತ ಸುಮಾರು 14,000 ಮಕ್ಕಳು ಶಾಲೆಯಿಂದ ಹೊರಗುಳಿದ್ದಿದಾರೆ ಹಾಗೂ 2497 ಮಕ್ಕಳು ಮಾದಕ ವಸ್ತುಗಳ ಬಳಕೆಯಿಂದ ಖಿನ್ನತೆಗೆ ಒಳಗಾಗಿದ್ದಾರೆ. ಇವುಗಳಿಗೆ ಕಾರಣಗಳನ್ನು ಕಲೆಹಾಕಿ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಮಕ್ಕಳ ಹಕ್ಕು ಮತ್ತು ರಕ್ಷಣೆಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ ಎಂದ ಅವರು ಇವುಗಳ ಸೌಲಭ್ಯಗಳನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮಕ್ಕಳಲ್ಲಿ ತಮ್ಮ ಸುರಕ್ಷತೆ ಹಾಗೂ ಹಕ್ಕುಗಳ ರಕ್ಷಣೆಗಾಗಿ ಇರುವ ಕಾನೂನುಗಳ ಕುರಿತು ಮಾಹಿತಿ ಇರಬೇಕು. ಯಾವುದೇ ವ್ಯಕ್ತಿಯಿಂದ ಲೈಗಿಂಕ ದೌರ್ಜನ್ಯಕ್ಕೆ ಒಳಗಾಗದಂತೆ ತಪ್ಪಿಸಲು ಸುರಕ್ಷಿತ ಹಾಗೂ ಅಸುರಕ್ಷಿತ ಸ್ಪರ್ಶದ ಬಗ್ಗೆ ಪ್ರಜ್ಞೆ ಇರಬೇಕು. ರಾಜ್ಯದಲ್ಲಿ ಒಟ್ಟು 10.247 ಮಕ್ಕಳ ಮೇಲಿನ ಲೈಗಿಂಕ ದೌರ್ಜನ್ಯ ಪ್ರಕರಣಗಳು ದಾಖಲಾಗಿದೆ ಹಾಗೂ ದೌರ್ಜನ್ಯ ವೆಸಗುವವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುತ್ತಿದೆ. ಮಕ್ಕಳು ಯಾವುದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ತಾವು ನೇರವಾಗಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಕರೆ ಮಾಡಿ ದೂರುಗಳನ್ನು ಸಲ್ಲಿಸಬಹುದು. ತಮ್ಮ ದೂರುಗಳನ್ನು ಗೌಪ್ಯವಾಗಿರಿಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತದೆ ಎಂದ ಅವರು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತಡೆಗಟ್ಟಿ ಅವರನ್ನು ರಕ್ಷಿಸುವುದು ನಮ್ಮ ಜವಾಬ್ದಾರಿ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಹಾಂತೇಶ್ ಭಜಂತ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ. ಪ್ರತಿಯೊಂದು ಮಗುವಿಗೂ ಜೀವಿಸುವ, ಉತ್ತಮ ಆರೋಗ್ಯ ಸೇವೆ, ಪೌಷ್ಠಿಕ ಆಹಾರ ಪಡೆದು ದೇಶದ ಪ್ರಜೆ ಎಂದು ಗುರುತಿಸಿಕೊಂಡು ಬದುಕುವ ಹಕ್ಕಿದೆ. ಶಿಕ್ಷಣ ಹಾಗೂ ಸಾಮಾಜಿಕ ಭದ್ರತೆ ಮನೋರಂಜನೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಕಾಸ ಹೊಂದುವ ಹಕ್ಕಿದೆ. ದಬ್ಬಾಳಿಕೆ ಹಾಗೂ ಲೈಂಗಿಕ ಕಿರುಕುಳ ಹಾಗೂ ಇತರೆ ಸಂಘರ್ಷಗಳಿಂದ ರಕ್ಷಣೆ ಪಡೆಯುವ ಹಕ್ಕುಗಳ ಜೊತೆಗೆ ಭಾಗವಹಿಸುವ ಹಕ್ಕನ್ನು ಹೊಂದಿರುತ್ತಾರೆ.
ಇವುಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಕ್ಕಳ ರಕ್ಷಣೆಯ ಕುರಿತು ಜಿಲ್ಲೆಯ ಎಲ್ಲಾ ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವಸತಿ ನಿಲಯ ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಅನೇಕರಿಗೆ ತರಬೇತಿ ನೀಡಲಾಗುತ್ತಿದೆ. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಮಿಟಿ ರಚಿಸಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಕ್ರಮವಹಿಸಲಾಗುತ್ತಿದೆ ಎಂದ ಅವರು ಮಕ್ಕಳು ತಮಗಿರುವ ಕಾನೂನು ಕ್ರಮಗಳು ಮತ್ತು ಹಕ್ಕುಗಳ ಅರಿತು ಶಿಕ್ಷಣವಂತರಾಗಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಶ್ವಥ್ ಬಾಬು, ಜಿಲ್ಲಾ ಕಾರ್ಮಿಕ ಅಧಿಕಾರಿ ಸುರೇಶ್ ಬಿ.ಸಿ, ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ ಯೋಜನಾ ಸಮನ್ವಯಾಧಿಕಾರಿ ಭಾಗೀರಥಿ ಹೆಚ್.ಸಿ, ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಪ್ರಾಂಶುಪಾಲೆ ಸಂಧ್ಯಾ ಕೆ.ಎಂ. ಸೇರಿದಂತೆ ವಿವಿಧ ಇಲಾಖೆ ಅಧಿಕಾರಿ ಸಿಬ್ಬಂಧಿಗಳು ಹಾಗೂ ವಿವಿಧ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



