ಅಮೆರಿಕದ 47ನೇ ಅಧ್ಯಕ್ಷರಾಗಿ ಚುನಾಯಿತರಾಗಿರುವ 78 ವರ್ಷದ ಡೊನಾಲ್ಡ್ ಟ್ರಂಪ್ 2ನೇ ಅವಧಿಗೆ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಮೆರಿಕದ ಕಾಲಮಾನದ ಪ್ರಕಾರ ಮಧ್ಯಾಹ್ನ 12.30ಕ್ಕೆ (ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 10.30ಕ್ಕೆ) ಟ್ರಂಪ್ ಪ್ರಮಾಣವಚನ ಸಮಾರಂಭ ನಡೆದಿದ್ದು, ಇದರಲ್ಲಿ ಪಾಲ್ಗೊಳ್ಳಲು ಇಂದು ಮುಂಜಾನೆಯಿಂದಲೇ ಜನರು ಕಿಕ್ಕಿರಿದು ಸೇರಿದ್ದರು. ಭಾರತ ಸರ್ಕಾರದ ಪರವಾಗಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅಮೆರಿಕದಲ್ಲಿ ನಡೆದ ಡೊನಾಲ್ಡ್ ಟ್ರಂಪ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಟ್ರಂಪ್ಗೆ ಮೋದಿ ಬರೆದು ಕಳುಹಿಸಿದ ಶುಭಾಶಯ ಪತ್ರವನ್ನು ನೀಡಿದ್ದಾರೆ.
ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೇರೆ ದೇಶಗಳ ನಾಯಕರನ್ನು ಅಮೆರಿಕದ ಅಧ್ಯಕ್ಷರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ. ಇದಕ್ಕೂ ಮುನ್ನ ಅಮೆರಿಕದ ಮಾಜಿ ಅಧ್ಯಕ್ಷ ಜೈ ಬೈಡೆನ್ ಮತ್ತು ಜಿಲ್ ಬಿಡೆನ್ ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್ ಮತ್ತು ಅವರ ಪತ್ನಿ ಮೆಲಾನಿಯಾ ಅವರಿಗೆ ಚಹಾ ಪಾರ್ಟಿ ಆಯೋಜಿಸಿದ್ದರು. ಇದಾದ ನಂತರ ನಾಲ್ಕೂ ಜನ ಒಟ್ಟಿಗೇ ಕ್ಯಾಪಿಟಲ್‌ಗೆ ನಡೆದ ಸಮಾರಂಭಕ್ಕೆ ಪ್ರಯಾಣಿಸಿದ್ದರು.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಟ್ರಂಪ್-ವ್ಯಾನ್ಸ್ ಉದ್ಘಾಟನಾ ಸಮಿತಿಯ ಆಹ್ವಾನದ ಮೇರೆಗೆ ಅವರು ಸಮಾರಂಭದಲ್ಲಿ ಭಾಗವಹಿಸಿದ್ದಾರೆ. ಮೋದಿ ಮಾತ್ರವಲ್ಲದೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಅಭಿನಂದನೆ ಸಲ್ಲಿಸಿದ್ದಾರೆ.


