ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ರವರ ಕಿರುಕುಳದಿಂದ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಮಧ್ಯಪ್ರವೇಶಿಸಿ ಸೂಕ್ತ ಕಾನೂನು ತರಲು ಮುಂದಾಗಿದೆ.
ಅದರ ಭಾಗವಾಗಿ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿರುವ ಮೈಕ್ರೋ ಫೈನಾನ್ಸ್ ಗಳ ವ್ಯವಸ್ಥಾಪಕರೊಂದಿಗೆ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಜಿಲ್ಲಾಧಿಕಾರಿ ಡಾ. ಮೀನಾ ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ ಮೈಕ್ರೋ ಫೈನಾನ್ಸ್ ಕಂಪನಿಗಳು ತಾವು ಗ್ರಾಹಕರಿಗೆ ನೀಡಿರುವ ಸಾಲ ವಸೂಲಾತಿಯಲ್ಲಿ ಒತ್ತಾಯಪೂರ್ವಕ ಕ್ರಮಗಳನ್ನು ಕೈಗೊಳ್ಳಬಾರದು, ಕಾನೂನು ರೀತಿಯಲ್ಲಿ ಬಡ್ಡಿ ವಿದಿಸಬೇಕು. ಜನರಿಗೆ ಕಿರುಕುಳ ನೀಡಬಾರದು, ಅಂತಹ ಪ್ರಕರಣಗಳು ಕಂಡಬಂದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಸಾಲ ವಿತರಣೆ ಮತ್ತು ಮರುಪಾವತಿ ಪ್ರಕ್ರಿಯೆಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ವಿವಿಧ ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕರುಗಳು ಭಾಗವಹಿಸಿದ್ದರು.




