ಗಲಭೆ ಪೀಡಿತ ಮಣಿಪುರ ರಾಜ್ಯದ ಮುಖ್ಯಮಂತ್ರಿ ಬಿರೇನ್ ಸಿಂಗ್ ದಿಢೀರ್ ರಾಜೀನಾಮೆ ನೀಡಿದ್ದಾರೆ. ಭಾನುವಾರ ಸಂಜೆ ರಾಜ್ಯಪಾಲರಿಗೆ ತಮ್ಮ ರಾಜೀನಾಮೆಯನ್ನು ಹಸ್ತಾಂತರಿಸಿದ್ದಾರೆ.
ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು ಎರಡು ವರ್ಷಗಳ ನಂತರ ಬಿರೇನ್ ಸಿಂಗ್ ರಾಜಿನಾಮೆ ನೀಡಿದ್ದಾರೆ. ತಮ್ಮ ನಾಯಕತ್ವದ ವಿರುದ್ಧ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತವನ್ನು ಬಗೆಹರಿಸಲು ಅವರು ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಮಿತ್ರಪಕ್ಷ ಕಾನ್ರಾಡ್ ಸಂಗ್ಮಾ ಅವರ ರಾಷ್ಟ್ರೀಯ ಪೀಪಲ್ಸ್ ಪಾರ್ಟಿ ಈ ಹಿಂದೆ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿತ್ತು. ಅದಾಗ್ಯೂ, ಬಿಜೆಪಿಗೆ ಸಂಖ್ಯಾಬಲವಿದ್ದರೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯನ್ನು ಬಯಸುತ್ತಿರುವ ಶಾಸಕರು ಬಹುಮತ ಪರೀಕ್ಷೆಯ ಸಂದರ್ಭದಲ್ಲಿ ಪಕ್ಷದ ವಿಪ್ ನಿರ್ಲಕ್ಷಿಸುವ ಸಾಧ್ಯತೆಯಿದೆ ಎಂದು ಮಣಿಪುರದ ಮಾಧ್ಯಮಗಳು ವರದಿ ಮಾಡಿವೆ.
ಸುಮಾರು 12 ಶಾಸಕರು ನಾಯಕತ್ವ ಬದಲಾವಣೆಗೆ ತೀವ್ರವಾಗಿ ಒತ್ತಾಯಿಸುತ್ತಿದ್ದು, ಸುಮಾರು ಆರು ಶಾಸಕರು ಬೇರೆ ಪಕ್ಷಗಳಿಗೆ ಪಕ್ಷಾಂತರವಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬೆಳಿಗ್ಗೆ ದೆಹಲಿಗೆ ತೆರಳಿದ್ದ ಬಿರೇನ್ ಸಿಂಗ್, ಅಲ್ಲಿ ಬಿಜೆಪಿ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.
ಮಣಿಪುರದಲ್ಲಿ ಕಳೆದ ಎರಡು ವರ್ಷಗಳಿಂದ ನಿರಂತರ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದು, ಇದರಿಂದ ಹತ್ತಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ ಎಂಬ ದೂರುಗಳು ಕೇಳಿಬಂದಿದ್ದವು.
ಇತ್ತ ಬಿರೇನ್ ಸಿಂಗ್ ಅವರ ರಾಜೀನಾಮೆಯಿಂದ ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿದ್ದು, ಪರ್ಯಾಯ ಸರ್ಕಾರ ರಚನೆಯಾಗುತ್ತದೆಯೋ ಅಥವಾ ರಾಷ್ಟ್ರಪತಿ ಆಡಳಿತ ಜಾರಿಗೆ ಬರುತ್ತದೆಯೋ ಕಾದು ನೋಡಬೇಕು.



