ಕಾಫಿತೋಟದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ತೀರ್ಥಕೆರೆ ಬಳಿ ಭಾನುವಾರ ಸಂಜೆ ಈ ಘಟನೆ ನಡೆದಿದೆ.
ಸುಮಾರು 40 ಕಾರ್ಮಿಕರು ತೀರ್ಥಕೆರೆ ಸಮೀಪದ ಎಸ್ಟೇಟ್‌ನಲ್ಲಿ ಕೆಲಸ ಮುಗಿಸಿಕೊಂಡು, ಜಯಪುರ ಪಟ್ಟಣದಲ್ಲಿ ದಿನಸಿ ಖರೀದಿಸಿಕೊಂಡು ಟ್ರ್ಯಾಕ್ಟರ್ನಲ್ಲಿ ವಾಪಸ್ ತೀರ್ಥಕೆರೆ ಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ತೀರ್ಥಕೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಕ್ಟರ್ 20 ಅಡಿ ಆಳಕ್ಕೆ ಬಿದ್ದಿದೆ. ಘಟನೆಯಲ್ಲಿ ಬಹುತೇಕ ಎಲ್ಲಾ ಕಾರ್ಮಿಕರು ಗಾಯಗೊಂಡಿದ್ದು, ಅದರಲ್ಲಿ 13ಕ್ಕೂ ಅಧಿಕ ಕಾರ್ಮಿಕರು ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಜಯಪುರ ಮತ್ತು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿದೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



