ಬಾಳೂರು ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ಐತಿಹಾಸಿಕ ದೇವರಮನೆ ಗುಡ್ಡದಲ್ಲಿ ಮಂಗಳವಾರ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು.
ಅರಣ್ಯ ಇಲಾಖೆಯ ಸಿಬ್ಬಂದಿ ತ್ವರಿತ ಕಾರ್ಯಾಚರಣೆಯ ಮೂಲಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಪ್ರದೇಶಕ್ಕೆ ಪ್ರವಾಸಿಗರು ಹಾಗೂ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದು, ಕಾಡ್ಗಿಚ್ಚಿನಿಂದ ಭಾರೀ ಹಾನಿ ಸಂಭವಿಸುವ ಸಾಧ್ಯತೆ ಇತ್ತು.
ಯಾರೋ ಕಿಡಿಗೇಡಿಗಳು ಹಚ್ಚಿದ ಬೆಂಕಿಯಿಂದ ಹುಲ್ಲುಗಾವಲು, ಗಿಡಗಂಟಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.
ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ರಂಜಿತ್, ಗಸ್ತು ಅರಣ್ಯ ಪಾಲಕ ಅಭಿಜಿತ್, ಉಮೇಶ್ ಮತ್ತು ಅರಣ್ಯ ವೀಕ್ಷಕ ದಿನೇಶ್ ತಂಡ ಹರಸಾಹಸ ಪಟ್ಟು ಬೆಂಕಿ ನಂದಿಸಿದೆ.
ಇಲ್ಲಿನ ಐತಿಹಾಸಿಕ ಸ್ಥಳದ ಸುರಕ್ಷತೆ ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು ಈ ಪ್ರದೇಶದಲ್ಲಿ ನಿಗಾ ದಳವನ್ನು ಬಿಗಿಗೊಳಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ



