ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಹೆಚ್ಚಳಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಚಿಕ್ಕಮಗಳೂರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಹನುಮಂತಪ್ಪ ವೃತ್ತದಿಂದ ಕೇಂದ್ರಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ, ಗ್ಯಾಸ್ ಸಿಲಿಂಡರ್, ಸೌದೆ ಮತ್ತು ಕಾರಿಗೆ ಹಗ್ಗ ಕಟ್ಟಿ ಎಳೆದುಕೊಂಡು ಮೆರವಣಿಗೆ ಹೊರಟ ಪ್ರತಿಭಟನಾಕಾರರು ಆಜಾದ್ ವೃತ್ತದಲ್ಲಿ ಸಮಾವೇಶಗೊಂಡು ಕಾಂಗ್ರೆಸ್ ಚಿಕ್ಕಮಗಳೂರು ಕ್ಷೇತ್ರ ಸಮಿತಿ ಮತ್ತು ಯುವ ಕಾಂಗ್ರೆಸ್ ಮುಖಂಡರು ಬೆಲೆ ಏರಿಕೆಯನ್ನು ವಿರೋಧಿಸಿ ಪ್ರತಿಭಟಿಸುವ ಮೂಲಕ ಬಿಜೆಪಿ ಮತ್ತು ಪ್ರಧಾನಿ ನರೇಂದ್ರಮೋದಿ ವಿರುದ್ಧ ಘೋಷಣೆ ಕೂಗಿದರು.
ಈಗಾಗಲೇ ಹೆಚ್ಚಳಗೊಳಿಸಿರುವ ಬೆಲೆಯನ್ನು ಕಡಿತಗೊಳಿಸಬೇಕೆಂದು ಆಗ್ರಹಿಸಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.
ನಂತರ ಪ್ರತಿಭಟನಾ ನಿರತನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್, ರಾಜ್ಯದಲ್ಲಿ ಬಿಜೆಪಿ ತನ್ನ ಜವಾಬ್ದಾರಿಯನ್ನು ಮರೆತಿದೆ. ರಚನಾತ್ಮಕ ವಿರೋಧಪಕ್ಷವಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದ ಅವರು, ಕೇಂದ್ರ ಸರ್ಕಾರ ಅದಾನಿ, ಅಂಬಾನಿ ರಕ್ಷಣೆಗೆ ಮುಂದಾಗಿದೆ. ಅವರ ಆಸ್ತಿ ರಕ್ಷಣೆ ಮಾಡುವ ಕಾರ್ಯದಲ್ಲಿ ನಿರತವಾಗಿದೆ ಎಂದು ಆರೋಪಿಸಿದರು.
ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳ ಬದುಕನ್ನು ಹಸನುಗೊಳಿಸಲು ಮುಂದಾಗುತ್ತಿಲ್ಲ, ಸಂವಿಧಾನ ವಿರೋಧಿ ನಿಲುವು ತಾಳುವ ಮೂಲಕ ಸಂವಿಧಾನ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಅವೈಜ್ಞಾನಿಕ ಆರ್ಥಿಕ ನೀತಿಯಿಂದ ರೈತರ ಆದಾಯ ದ್ವಿಗುಣಗೊಳ್ಳುತ್ತಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚತೈಲ ಬೆಲೆ ಇಳಿಕೆಯಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳಗೊಳಿಸಿದೆ ಎಂದು ವಿವರಿಸಿದರು.
ಅಡುಗೆ ಅನಿಲ ಬೆಲೆ ೪೦೦ ರೂ.ಗಳಿಂದ ೧ ಸಾವಿರ ಗಡಿ ತಲುಪದೆ. ಯಾವ ನೈತಿಕತೆ ಆಧಾರದ ಮೇಲೆ ರಾಜ್ಯದಲ್ಲಿ ಬಿಜೆಪಿ ಮುಖಂಡರು ಬೆಲೆಏರಿಕೆ ವಿರೋಧಿಸಿ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆಂದು ಪ್ರಶ್ನಿಸಿ, ರಾಜ್ಯದಲ್ಲಿ ಯಾತ್ರೆ ಕೈಗೊಳ್ಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಬಿಜೆಪಿ ಮುಖಂಡರು ಮಾಡುತ್ತಿದ್ದಾರೆಂದು ದೂರಿದರು.
ಬಡವರ ಸಮಸ್ಯೆಗಳಿಗೆ ಬಿಜೆಪಿ ಸ್ಪಂದಿಸುತ್ತಿಲ್ಲ, ಪಂಚ ಗ್ಯಾರಂಟಿಗಳನ್ನು ಸಹಿಸಿಕೊಳ್ಳಲಾಗದೆ ಬಿಟ್ಟಿಭಾಗ್ಯಗಳೆಂದು ಹಿಯಾಳಿಸುತ್ತಿದ್ದಾರೆ. ಕೇಂದ್ರ ಸರ್ಕಾರ, ಇಂಧನ, ಅಡುಗೆ ಅನಿಲ, ಅಡುಗೆ ಎಣ್ಣೆಯ ದರವನ್ನು ಹೆಚ್ಚಳಗೊಳಿಸಿದ್ದರೂ ಇದರ ಬಗ್ಗೆ ರಾಜ್ಯ ಬಿಜೆಪಿ ಮುಖಂಡರು ತುಟಿ ಬಿಚ್ಚುತ್ತಿಲ್ಲವೆಂದು ಟೀಕಿಸಿದರು.
ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಪ್ರತಿ ಮನೆಗೆ ತಲುಪಿಸುವ ಕೆಲಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಬೇಕೆಂದು ಕರೆ ನೀಡಿದ ಅವರು, ಅಭಿವೃದ್ಧಿ ವಿಷಯದಲ್ಲಿ ಬಹಿರಂಗ ಚರ್ಚೆಗೆ ಬಿಜೆಪಿ ಮುಖಂಡರಿಗೆ ಪಂಥಾಹ್ವಾನ ನೀಡಿದರು.
ಕೆಪಿಸಿಸಿ ವಕ್ತಾರ ಹೆಚ್.ಹೆಚ್. ದೇವರಾಜ್ ಮಾತನಾಡಿ, ಹಲವಾರು ವರ್ಷ ಆಡಳಿತ ನಡೆಸಿರುವ ಕಾಂಗ್ರೆಸ್ ಪಕ್ಷಕ್ಕೆ ಆಡಳಿತ ಅನುಭವ ಇದೆ. ಡಾ. ಮನಮೋಹನ್‌ಸಿಂಗ್ ಪ್ರಧಾನಿಯಾಗಿದ್ದಾಗ ವಿವಿಧ ಸವಲತ್ತುಗಳನ್ನು ನೀಡಿರುವ ಬಗ್ಗೆ ಬಿಜೆಪಿ ಮುಖಂಡರು ಆತ್ಮಾವಲೋಕನ ಮಾಡಿಕೊಳ್ಳುವುದು ಒಳ್ಳೆಯದು ಎಂದರು.
ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲು ಬಿಜೆಪಿ ಮುಖಂಡರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ ಅವರು, ಪಂಚಗ್ಯಾರಂಟಿಗಳ ಸವಲತ್ತುಗಳನ್ನು ಬಿಜೆಪಿ ಮತ್ತು ಬಜರಂಗದಳ ಮುಖಂಡರ ಕುಟುಂಬಗಳು ಪಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದರು. ದೇಶಕ್ಕೆ ಮಾದರಿ ಆಡಳಿತ ನೀಡುತ್ತಿರುವ ರಾಜ್ಯ ಸರ್ಕಾರದ ಗ್ಯಾರಂಟಿಗಳನ್ನು ಬಿಜೆಪಿ ಮುಖಂಡರು ನಕಲು ಮಾಡುವ ಮೂಲಕ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರ ಹಿಡಿದಿದ್ದಾರೆಂದರು.
ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಮಾತನಾಡಿ, ಕೇಂದ್ರ ಸರ್ಕಾರವೇ ಅಡುಗೆ ಅನಿಲ ಮತ್ತು ಇಂಧನ ಬೆಲೆಗಳನ್ನು ಹೆಚ್ಚಿಸಿದ್ದು, ರಾಜ್ಯದಲ್ಲಿ ಬೆಲೆ ಏರಿಕೆ ವಿರೋಧಿಸಿ ಜನಾಕ್ರೋಶಯಾತ್ರೆ ಹಮ್ಮಿಕೊಂಡಿರುವುದರಲ್ಲಿ ಅರ್ಥವಿಲ್ಲ. ಕೇಂದ್ರ ಸರ್ಕಾರ ನುಡಿದಂತೆ ನಡೆಯುತ್ತಿಲ್ಲ, ಹಾಗಾಗಿ ಲೋಕಸಭೆ ಚುನಾವಣೆಯಲ್ಲಿ ಬಹುಮತ ಬಾರದೆ ಪ್ರಾದೇಶಿಕ ಪಕ್ಷಗಳ ಬೆಂಬಲದಿಂದ ದೇಶದಲ್ಲಿ ಆಡಳಿತ ನಡೆಸುತ್ತಿದೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಿ.ಎಲ್.ವಿಜಯಕುಮಾರ್, ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಮಂಜೇಗೌಡ, ಮುಖಂಡರಾದ ಹಿರೇಮಗಳೂರು ರಾಮಚಂದ್ರ, ಮಲ್ಲೇಶ್, ಜಯರಾಜ್‌ನಾಯ್ಡು, ರಮೇಶ್, ಮಹ್ಮದ್ ಅಕ್ಬರ್, ಮಲ್ಲೇಶ್, ಲೋಕೇಶ್, ಪ್ರವೀಣ್, ತನೋಜ್‌ಕುಮಾರ್ ನಾಯ್ಡು, ಲಕ್ಷ್ಮಣ್ ಭಾಗವಹಿಸಿದ್ದರು.



