ಸರ್ಕಾರ ಪೇಪರ್‌ಲೆಸ್ ಸೇವೆ ಉತ್ತೇಜಿಸುವ ಉದ್ದೇಶದೊಂದಿಗೆ ರಾಜ್ಯದ ಕಂದಾಯ ಇಲಾಖೆ ಅಧಿಕಾರಿಗಳಿಗೆ ಅನುಕೂಲವಾಗುವಂತೆ ಲ್ಯಾಪ್‌ಟಾಪ್ ವಿತರಣೆಗೆ ಮುಂದಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.
ಅವರು ಬುಧವಾರ ಚಿಕ್ಕಮಗಳೂರು ತಾಲ್ಲೂಕು ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಲ್ಯಾಪ್‌ಟಾಪ್ ವಿತರಣಾ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿ ಲ್ಯಾಪ್‌ಟಾಪ್ ಪಡೆದುಕೊಂಡ ಕಂದಾಯ ಇಲಾಖೆ ಅಧಿಕಾರಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು, ಬೇರೆಯವರಿಗೆ ಲ್ಯಾಪ್‌ಟಾಪ್ ಕೊಡುವ ಮೂಲಕ ಸರ್ಕಾರದ ಅಗತ್ಯ ಮಾಹಿತಿಗಳು ಸೋರಿಕೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಇದೂವರೆಗೆ ಗ್ರಾಮ ಲೆಕ್ಕಾಧಿಕಾರಿಗಳು ಮೊಬೈಲ್‌ನಲ್ಲಿ ದಾಖಲೆ ಪತ್ರಗಳನ್ನು ಸಿದ್ಧಪಡಿಸುವ ಮೂಲಕ ಸೇವೆ ಸಲ್ಲಿಸುತ್ತಿದ್ದರು. ಇದನ್ನರಿತ ಕಂದಾಯ ಸಚಿವ ಕೃಷ್ಣಭೈರೇಗೌಡ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರುಗಳು ಚರ್ಚಿಸಿ ರಾಜ್ಯದ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಿಲು ನಿರ್ಧರಿಸಿದ್ದಾರೆ ಎಂದರು.
ಪ್ರತೀ ಲ್ಯಾಪ್‌ಟಾಪ್‌ಗೆ 40 ಸಾವಿರ ರೂ ವೆಚ್ಚವಾಗುತ್ತಿದ್ದು, ಈಗಾಗಲೇ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಿಲ್ಲಾ ಅಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರಿಗೆ ಒತ್ತಡವನ್ನು ಮುಕ್ತಗೊಳಿಸುವ ಗುರಿಯೊಂದಿಗೆ ಸರ್ಕಾರ ಈ ಸೌಲಭ್ಯ ನೀಡಲು ಮುಂದಾಗಿದೆ ಎಂದರು.
ಲ್ಯಾಪ್‌ಟಾಪ್ ಪಡೆದುಕೊಂಡ ಎಲ್ಲಾ ಕಂದಾಯ ಇಲಾಖೆ ಅಧಿಕಾರಿಗಳು ರಾಜ್ಯ ಕಂದಾಯ ಇಲಾಖೆಗೆ ಜಿಲ್ಲೆಯ ಸಮಗ್ರ ಮಾಹಿತಿಯನ್ನು ನೀಡುವುದರ ಜೊತೆಗೆ ಸಾರ್ವಜನಿಕರಿಗೆ, ಬಡವರಿಗೆ ಸರಳವಾಗಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ತಹಶೀಲ್ದಾರ್ ರೇಷ್ಮಾ ಮಾತನಾಡಿ, ಕಂದಾಯ ಇಲಾಖೆಗೆ ಸಂಬಂಧಿಸಿದ ಬಗರ್ ಹುಕ್ಕುಂ, 1-5 ಸೇರಿದಂತೆ ಎಲ್ಲಾ ರೀತಿಯ ಯೋಜನೆಗಳನ್ನು ಲ್ಯಾಪ್‌ಟಾಪ್‌ನಲ್ಲಿ ದಾಖಲು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಇದೂವರೆಗೆ ಇಲಾಖೆಯಲ್ಲಿ ಮೂಲ ಸೌಕರ್ಯವಿಲ್ಲ, ನೆಟ್‌ವರ್ಕ್ ಸಿಗಲ್ಲ ಎಂಬಿತ್ಯಾದಿ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿ ಲ್ಯಾಪ್‌ಟಾಪ್ ವಿತರಿಸಲಾಗಿದ್ದು, ಇದರಿಂದ ಗ್ರಾಮ ಲೆಕ್ಕಾಧಿಕಾರಿಗಳಿಗೆ ಅನುಕೂಲವಾಗಲಿದೆ ಎಂದರು.
ಒಟ್ಟು 44 ಗ್ರಾಮ ಲೆಕ್ಕಾಧಿಕಾರಿಗಳಿದ್ದು, ಇದರಲ್ಲಿ ಅವಶ್ಯಕತೆಗನುಗುಣವಾಗಿ 34 ಜನರ ಪಟ್ಟಿ ಮಾಡಿದ್ದು, ಶಾಸಕ ಹೆಚ್.ಡಿ. ತಮ್ಮಯ್ಯ ನೇತೃತ್ವದಲ್ಲಿ ವಿತರಣೆ ಮಾಡಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಿರಸ್ತೇದಾರ್ ಪ್ರಸನ್ನ, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.



