ಡೆತ್ ನೋಟ್ ಬರೆದಿಟ್ಟು ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಗುಪ್ತಚರ ಇಲಾಖೆಯ ಪೇದೆ ಮಧು (28 ವರ್ಷ) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಪೊಲೀಸ್ ಪೇದೆ. ಚಿಕ್ಕಮಗಳೂರು ಸಮೀಪದ ಕರ್ತಿಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮೂಲತಃ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಮಧು ಕಳೆದೊಂದು ವರ್ಷದಿಂದ ಶಿವಮೊಗ್ಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಒಂದು ತಿಂಗಳ ಹಿಂದಷ್ಟೆ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದರು.
ಅನಾರೋಗ್ಯದ ಸಮಸ್ಯೆ ಎಂದು ಡೆತ್ ನೋಟ್ ಬರೆದಿಟ್ಟು ತಮ್ಮ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಒಂದು ವಾರದ ಅವಧಿಯಲ್ಲಿ ಚಿಕ್ಕಮಗಳೂರಿನಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಆತ್ಮಹತ್ಯೆಗೆ ಶರಣಾದಂತಾಗಿದೆ. ಈಗ್ಗೆ ಕೆಲ ದಿನಗಳ ಹಿಂದಷ್ಟೇ ಎಸ್ಪಿ ಕಛೇರಿಯ ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ಕ್ವಾರ್ಟಸ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಈಗ ಮತ್ತೋರ್ವರು ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.



