ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕು ಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಪಾಯಕಾರಿ ಸ್ಥಳದಲ್ಲಿರುವ 17 ಕುಟುಂಬಗಳಿಗೆ ತ್ವರಿತವಾಗಿ ಪುನರ್ವಸತಿ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಸಾರ್ ಬಳಿ ಆನೆ ದಾಳಿಗೆ ಮೃತಪಟ್ಟ ಹರೀಶ್ ಶೆಟ್ಟಿ ಮತ್ತು ಉಮೇಶ್ ಗೌಡ ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿ ತಲಾ 5 ಲಕ್ಷ ರೂ. ಪರಿಹಾರ ವಿತರಿಸಿ ಮಾತನಾಡಿದ ಸಚಿವರು 17 ಮನೆಗಳು ಅಪಾಯಕಾರಿ ಪ್ರದೇಶಗಳಲ್ಲಿದ್ದು, ಅವುಗಳನ್ನು ತ್ವರಿತವಾಗಿ ಸ್ಥಳಾತರಿಸುವ ಕುರಿತು ಮುಖ್ಯಮಂತ್ರಿ ಯವರೊಂದಿಗೆ ಮಾತನಾಡಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದರು.
ಆನೆ ದಾಳಿ ನಡೆಯುವ ಪ್ರದೇಶಗಳಲ್ಲಿರುವ ಕುಟುಂಬಗಳ ಸ್ಥಳಾಂತರ ಪ್ಯಾಕೇಜ್ ಗೆ 300 ಕೋಟಿ ರೂ. ಅಗತ್ಯವಿದೆ. ಈಗಾಗಲೇ ಅರಣ್ಯ ಸಚಿವರೊಂದಿಗೆ ಮಾತನಾಡಿದ್ದು, ಹಣ ಬಿಡುಗಡೆಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ತಿಳಿಸಿದರು. ಆನೆ ದಾಳಿಗೆ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಗುತ್ತಿಗೆ ಆಧಾರದ ಮೇಲೆ ಉದ್ಯೋಗ ನೀಡುವ ಬೇಡಿಕೆ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳ ಜತೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಶೃಂಗೇರಿ ಶಾಸಕ, ಟಿ.ಡಿ.ರಾಜೇಗೌಡ, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ನಿನ್ನೆ ಶಾಸಕ ಟಿ.ಡಿ. ರಾಜೇಗೌಡ ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದರು. ಮೃತ ಕುಟುಂಬದವರಿಗೆ ತಲಾ 20 ಸಾವಿರ ಚೆಕ್ ವಿತರಿಸಿದರು. ಮಾಜಿ ಸಚಿವ
ಡಿ. ಎನ್. ಜೀವರಾಜ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಆನೆ ಹಾವಳಿ ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು , ಪರಿಹಾರ ನೀಡಿ ಕೈ ತೊಳೆದುಕೊಳ್ಳುವುದು ಸಮಸ್ಯೆಗೆ ಶಾಶ್ವತ ಪರಿಹಾರವಲ್ಲ. ಸ್ಥಳಾಂತರ ಬಯಸಿರುವ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಿ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿದರು.



