ಮಾಜಿ ಸಚಿವ, ಬಾಗಲಕೋಟೆ ಕ್ಷೇತ್ರದ ಹಾಲಿ ಕಾಂಗ್ರೇಸ್ ಶಾಸಕ ಹೆಚ್.ವೈ ಮೇಟಿ ಮಂಗಳವಾರ ನಿಧನ ಹೊಂದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ತೀವ್ರ ಅನಾರೋಗ್ಯದ ಕಾರಣ ಕೆಲ ದಿನಗಳಿಂದ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಹೆಚ್.ವೈ.ಮೇಟಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಹೆಚ್.ವೈ. ಮೇಟಿ 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು.
ಈ ಹಿಂದೆ 2013 ರಿಂದ 2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಹೆಚ್.ವೈ.ಮೇಟಿ ಅಬಕಾರಿ ಖಾತೆ ಮಂತ್ರಿಯಾಗಿದ್ದರು. ಆ ವೇಳೆ ಲೈಂಗಿಕ ಹಗರಣದಲ್ಲಿ ಸಿಲುಕಿ ಕ್ಯಾಬಿನೆಟ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ H.Y. ಮೇಟಿ, ಜಿಲ್ಲೆಯ ತಿಮ್ಮಾಪುರದಲ್ಲಿ 1946 ಅಕ್ಟೋಬರ್ 9ರಂದು ಜನಿಸಿದ್ದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದ H.Y.ಮೇಟಿ, 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರ 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ ಗೆದ್ದಿದ್ದರು.
ಹೆಚ್.ವೈ. ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ಇಂದು ಬುಧವಾರ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಪಕ್ಷದ ಪ್ರಮುಖರು ಈ ವೇಳೆ ಭಾಗಿಯಾಗಲಿದ್ದಾರೆ.



