ಮಲೆನಾಡಿನ ವಿವಿಧ ಸಮಸ್ಯೆಗಳ ಬಗ್ಗೆ ರೈತರ ಸಂಘಟನಗಳು ಮತ್ತು ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಮೂಡಿಗೆರೆ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಬಿ.ಸಿ. ದಯಾಕರ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು ; ತಾಲ್ಲೂಕಿನ ರೈತರ ಮತ್ತು ಸಾರ್ವಜನಿಕರ ವಿವಿಧ ಜ್ವಲಂತ ಸಮಸ್ಯೆಗಳ ಕುರಿತು ಹೋರಾಟ ರೂಪಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ವಿಶೇಷವಾಗಿ ಅರಣ್ಯ ಭೂಮಿ ಮತ್ತು ಕಂದಾಯ ಭೂಮಿ ಸಮಸ್ಯೆಗಳು, ರೈತರಿಗೆ ಮರಣಶಾಸನವಾಗಿರುವ ಎಸ್.ಐ.ಟಿ. ರಚನೆ ವಿರೋಧಿಸುವುದು, ಆನೆ ಮತ್ತು ಕಾಡುಪ್ರಾಣಿಗಳ ಹಾವಳಿ ವಿಚಾರ, ಸರ್ಫೇಸಿ ಕಾಯ್ದೆಯಿಂದ ರೈತರಿಗೆ ಆಗುತ್ತಿರುವ ಅನ್ಯಾಯದ ವಿಚಾರ, ಮೂಡಿಗೆರೆಯಿಂದ ಮೂಗ್ತಿಹಳ್ಳಿವರೆಗೆ ಹೆದ್ದಾರಿ ನಿರ್ಮಾಣ ವಿಳಂಬವಾಗುತ್ತಿರುವ ವಿಚಾರ, ಜೊತೆಗೆ ತಾಲೂಕಿನ ವಿವಿಧ ರಸ್ತೆಗಳ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸುವ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಮುಂದಿನ ದಿನಗಳಲ್ಲಿ ಗ್ರಾಮ ಗ್ರಾಮಗಳಲ್ಲಿ ಜನರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಜಾಗೃತಿ ಮೂಡಿಸಲಾಗುವುದು, ಹೆಚ್ಚಿನ ಜನರನ್ನು ಕ್ರೂಢೀಕರಿಸಿ ಹೋರಾಟ ರೂಪಿಸಲಾಗುವುದು, ಸರ್ಕಾರಗಳು ಮತ್ತು ಜನಪ್ರತಿನಿಧಿಗಳನ್ನು ಎಚ್ಚರಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು. ಮುಂದಿನ ಸಭೆಯ ದಿನಾಂಕ ಮತ್ತು ವಿವರಗಳನ್ನು ತಿಳಿಸಲಾಗುವುದು, ಆ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಬೇಕೆಂದು ಕೋರಿದ್ದಾರೆ.
ರೈತ ಸಂಘ, ಹಸಿರು ಸೇನೆ, ಕರ್ನಾಟಕ ರಕ್ಷಣಾ ವೇದಿಕೆ, ಕೆಂಪೇಗೌಡ ಒಕ್ಕಲಿಗರ ವೇದಿಕೆ, ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.



