ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣಾ ಅಖಾಡ ರಂಗೇರಿದೆ. ಚುನಾವಣಾ ಅಖಾಡಕ್ಕೆ ಘಟಾನುಘಟಿ ನಾಯಕರೇ ಪ್ರವೇಶ ಮಾಡುತ್ತಿದ್ದು, ದಿನದಿಂದ ದಿನಕ್ಕೆ ಚುನಾವಣಾ ಕಾವು ಬಿಸಿಯಾಗುತ್ತಿದೆ. ಪ್ರಮುಖವಾಗಿ ಮಾಜಿ ಸಚಿವ ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಮತ್ತೋರ್ವ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಕಣದಲ್ಲಿ ಸಂಚಲನ ಮೂಡಿಸಿದ್ದಾರೆ. ಮಾಜಿ ಮತ್ತು ಹಾಲಿ ಶಾಸಕರುಗಳೇ ನೇರವಾಗಿ ಅಖಾಡಕ್ಕೆ ಇಳಿದಿರುವುದು ಈ ಬಾರಿಯ ಚುನಾವಣೆಯನ್ನು ಜಿಲ್ಲಾ ರಾಜಕಾರಣದ ಪ್ರತಿಷ್ಠೆಯ ಕಣವನ್ನಾಗಿಸಿದೆ.
ಒಟ್ಟು 13 ನಿರ್ದೇಶಕರ ಸ್ಥಾನಗಳಿಗೆ ನಡೆಯಲಿರುವ ಈ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಡುವ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್ ಪಕ್ಷದಿಂದ ಈವರೆಗೆ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಲ್ಲ.
ಕಾಂಗ್ರೆಸ್ ಸಮರ್ಥ ಅಭ್ಯರ್ಥಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಶುಕ್ರವಾರ ಕಡೆಯ ದಿನವಾಗಿದೆ.
ಇದೇ ತಿಂಗಳ 17ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಅಂದೇ ಸಂಜೆ ಮತ ಎಣಿಕೆ ಕಾರ್ಯ ನಡೆದು ಫಲಿತಾಂಶ ಪ್ರಕಟವಾಗಲಿದೆ.



