ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಿ.ಟಿ.ರವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕೊಪ್ಪದ ದಿನೇಶ್ ಹೊಸೂರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಿ.ಟಿ.ರವಿ ಮತ್ತು ದಿನೇಶ್ ಹೊಸೂರು ಅವರ ಹೆಸರನ್ನು ಅಂತಿಮಗೊಳಿಸಲಾಗಿತ್ತು. ಅದರಂತೆ ಭಾನುವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅವರಿಬ್ಬರೇ ನಾಮಪತ್ರ ಸಲ್ಲಿಸಿದ್ದರು.
ಸಿ.ಟಿ.ರವಿಯವರು ಚಿಕ್ಕಮಗಳೂರು ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಪಡೆದಿದ್ದರು. ಇದೇ ಮೊದಲ ಬಾರಿಗೆ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿದ್ದು, ಪ್ರಥಮ ಅವಧಿಯಲ್ಲೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲೆಯ ಎಲ್ಲಾ ಟಿಎಪಿಸಿಎಂಎಸ್ ಕ್ಷೇತ್ರಗಳಿಂದ 1 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಡೂರು ಶಾಸಕ ಕೆ.ಎಸ್. ಆನಂದ್ ಅವರನ್ನು ಸೋಲಿಸಿದ್ದ ಕೊಪ್ಪದ ದಿನೇಶ್ ಹೊಸೂರು ಅವರಿಗೆ ಉಪಾಧ್ಯಕ್ಷ ಪಟ್ಟ ಒಲಿದಿದೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗುವ ಮೂಲಕ ಸಿ.ಟಿ.ರವಿ ಯವರು ತಮ್ಮ ರಾಜಕೀಯ ಜೀವನದ ಮತ್ತೊಂದು ಮೈಲಿಗಲ್ಲು ತಲುಪಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ ಅತ್ಯಂತ ಪ್ರಭಾವಶಾಲಿ ಹುದ್ದೆಯಾಗಿದೆ. ಜಿಲ್ಲೆಯ ಸಹಕಾರಿ ಕ್ಷೇತ್ರದ ಕೇಂದ್ರ ಸ್ಥಾನವಾಗಿದೆ. ಈ ಸ್ಥಾನದಿಂದ ಜಿಲ್ಲೆಯ ರೈತರಿಗೆ ಸಾಕಷ್ಟು ಅನುಕೂಲ ಮಾಡಿಕೊಡಲು ಅವಕಾಶವಿದೆ. ಈ ನಿಟ್ಟಿನಲ್ಲಿ ನೂತನ ಅಧ್ಯಕ್ಷರಾದ ಸಿ.ಟಿ.ರವಿಯವರು ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಲಿ ಎಂಬುದು ಎಲ್ಲರ ಅಭಿಲಾಷೆಯಾಗಿದೆ.

ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ) ಚುನಾವಣೆಯಲ್ಲಿ ಎನ್.ಡಿ.ಎ. ಮೈತ್ರಿಕೂಟ ಭರ್ಜರಿ ಜಯ ಸಾಧಿಸಿತ್ತು. ಒಟ್ಟು 13 ನಿರ್ದೇಶಕ ಸ್ಥಾನಗಳಲ್ಲಿ 11 ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡರೆ, ಜೆಡಿಎಸ್ 2 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಕಾಂಗ್ರೇಸ್ ಈ ಚುನಾವಣೆಯಲ್ಲಿ ಖಾತೆ ತೆರೆಯಲು ವಿಫಲವಾಗಿತ್ತು.



