ಕಾಲೇಜು ಶಿಕ್ಷಣ ಇಲಾಖೆ, ಕುವೆಂಪು ವಿಶ್ವವಿದ್ಯಾಲಯ ಮತ್ತು ಐಡಿಎಸ್‍ಜಿ ಸರ್ಕಾರಿ ಕಾಲೇಜು ಇವರ ಆಶ್ರಯದಲ್ಲಿ 2025-26ನೇ ಸಾಲಿನ ಕುವೆಂಪು ವಿದ್ಯಾಲಯದ ಅಂತರ ಕಾಲೇಜು ಪುರುಷರ ಕಬಡ್ಡಿ ಪಂದ್ಯಾವಳಿ ಫೆ.13 ಮತ್ತು 14 ರಂದು ಚಿಕ್ಕಮಗಳೂರು ಐಡಿಎಸ್‍ಜಿ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಐಡಿಎಸ್‍ಜಿ ಕಾಲೇಜಿನ ಪ್ರಿನ್ಸಿಪಾಲ್ ತಸನಿಮ್ ಕೌಸರ್ ಮನಿಯಾರ್ ತಿಳಿಸಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಫೆ.13 ರಂದು ಬೆಳಿಗ್ಗೆ 10-30 ಕ್ಕೆ ಕಬಡ್ಡಿ ಪಂದ್ಯಾವಳಿಯನ್ನು ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹೆಚ್.ಡಿ.ತಮ್ಮಯ್ಯ ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಹಾಗೂ ಅನಿವಾಸಿ ಭಾರತೀಯ ಕೋಶ ಉಪಾಧ್ಯಕ್ಷೆ ಹಾಗೂ ವಿಧಾನ ಪರಿಷತ್ ಸದಸ್ಯೆ ಡಾ.ಆರತಿಕೃಷ್ಣ ಘನ ಉಪಸ್ಥಿತರಿರಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಸಿ.ಟಿ.ರವಿ, ವಿಶೇಷ ಆಹ್ವಾನಿತರಾಗಿ ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್, ಕುವೆಂಪು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಎನ್.ಡಿ.ವಿರೂಪಾಕ್ಷ, ಐಡಿಎಸ್‍ಜಿ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಕೆ.ಸಿ.ಕುಮಾರಸ್ವಾಮಿ ಭಾಗವಹಿಸಲಿದ್ದು, ಕಾಲೇಜಿನ ಪ್ರಿನ್ಸಿಪಾಲ್ ತಸನಿಮ್ ಕೌಸರ್ ಮನಿಯಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.
ಫೆ.14 ರಂದು ಮಧ್ಯಾಹ್ನ 3-30ಕ್ಕೆ ಬಹುಮಾನ ವಿತರಣಾ ಸಮಾರಂಭ ನಡೆಯಲಿದ್ದು, ಬಹುಮಾನ ವಿತರಣೆಯನ್ನು ಕುವೆಂಪು ವಿಶ್ವವದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಎನ್.ಡಿ.ವಿರೂಪಾಕ್ಷ ವಿತರಿಸುವರು. ಕಾಲೇಜಿನ ಪ್ರಿನ್ಸಿಪಾಲ್ ತಸನಿಮ್ ಕೌಸರ್ ಮನಿಯಾರ್ ಅಧ್ಯಕ್ಷತೆ ವಹಿಸಲಿದ್ದು, ಕಾಲೇಜಿನ ಪ್ರಾಧ್ಯಾಪಕ ಎಸ್.ವಿ.ನಾಗರಾಜ, ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಲಕ್ಷ್ಮಿಕಾಂತ್ ಕೆ.ಎಸ್, ದೈಹಿಕ ಶಿಕ್ಷಣ ನಿರ್ದೇಶಕ ಕೆ.ಸಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಚಿಕ್ಕಮಗಳೂರು ಹಾಗೂ ಶಿವಮೊಗ್ಗ ವಲಯದ ಪ್ರಥಮ ದರ್ಜೆ ಕಾಲೇಜಿನ ಸುಮಾರು 35 ತಂಡಗಳು ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು, 400 ಕ್ರೀಡಾಪಟುಗಳು ಕಬಡ್ಡಿ ಕ್ರೀಡೆಯಲ್ಲಿ ಭಾಗವಹಿಸಲಿದ್ದಾರೆ. 10 ಜನ ತೀರ್ಪುಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಲಕ್ಷ್ಮಿಕಾಂತ್ ಕೆ.ಎಸ್, ದೈಹಿಕ ಶಿಕ್ಷಣ ನಿರ್ದೇಶಕ ಕೆ.ಸಿ.ಕುಮಾರಸ್ವಾಮಿ, ಮಹೇಶ್ ಉಪಸ್ಥಿತರಿದ್ದರು.



