ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28 ರಿಂದ ಮಾರ್ಚ್ 17ರವರೆಗೆ ನಡೆಯಲಿದ್ದು, ಪರೀಕ್ಷೆಗಳನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ, ಪಾರದರ್ಶಕವಾಗಿ ನಡೆಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಯಾವುದೇ ರೀತಿಯ ಗೊಂದಲಕ್ಕೆ ಅವಕಾಶವಿರದಂತೆ, ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸಬೇಕು. ಪರೀಕ್ಷೆಗೆ ಮೇಲ್ವಿಚಾರಕರ ನಿಯೋಜನೆ ಸೇರಿದಂತೆ ಪಿಯು ಪರೀಕ್ಷಾ ಪ್ರಾಧಿಕಾರದ ನಿರ್ದೇಶನವನ್ನು ಚಾಚೂ ತಪ್ಪದೆ ಪಾಲಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದು, ಕುಡಿಯುವ ನೀರಿನ ವ್ಯವಸ್ಥೆ, ಕೊಠಡಿಗಳ ಸ್ವಚ್ಛತೆ, ಬೆಂಚುಗಳ ವ್ಯವಸ್ಥೆ, ಗೋಡೆ ಗಡಿಯಾರ ಸೇರಿದಂತೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಉತ್ತಮ ವಾತಾವರಣ ಕಲ್ಪಿಸಬೇಕು. ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಚಲನವಲನಕ್ಕೆ ಸಂಬಂಧಿಸಿದಂತೆ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಸೇರಿದಂತೆ ಪರೀಕ್ಷಾ ಕೇಂದ್ರಗಳಲ್ಲಿ ಚಲನವಲನಗಳಿಗೆ ಸಂಬಂಧಿಸಿದಂತೆ ನಿಗಾ ವಹಿಸಬೇಕು. ವಿದ್ಯಾರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕೊಂಡೊಯ್ಯುವಂತಿಲ್ಲ ಎಂದ ಅವರು, ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಹಾಗೂ ಕೊಠಡಿ ಸಂಖ್ಯೆಗಳನ್ನು ಖಾತ್ರಿಪಡಿಸಿಕೊಳ್ಳಲು ಪರೀಕ್ಷಾ ಕೇಂದ್ರಗಳಲ್ಲಿ ಮಾಹಿತಿ ಒದಗಿಸುವಂತಾಗಬೇಕು. ಪರೀಕ್ಷಾ ದಿನಗಳಲ್ಲಿ ಅಗತ್ಯ ವಾಹನಗಳ ವ್ಯವಸ್ಥೆ ಜೊತೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆಯಿಂದ ಶುಶ್ರೂಷಕರನ್ನು ನೇಮಕ ಮಾಡಬೇಕು ಎಂದು ಸೂಚಿಸಿದರು.
ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಕೆ.ಮಂಜುಳ ಮಾತನಾಡಿ, ಜಿಲ್ಲೆಯ ಒಟ್ಟು 19 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಒಟ್ಟು 8890 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 8315 ಹೊಸ ವಿದ್ಯಾರ್ಥಿಗಳು, 351 ಪುನರಾವರ್ತಿತ ಅಭ್ಯರ್ಥಿಗಳು, 222 ಖಾಸಗಿ ಅಭ್ಯರ್ಥಿಗಳು ಹಾಗೂ ಇಬ್ಬರು ಇತರೆ ಅಭ್ಯರ್ಥಿಗಳು ಸೇರಿದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ ಕಲಾವಿಭಾಗದಲ್ಲಿ 1990, ವಿಜ್ಞಾನ ವಿಭಾಗದಲ್ಲಿ 3800 ಹಾಗೂ ವಾಣಿಜ್ಯ ವಿಭಾಗದಲ್ಲಿ 3100 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲ ತಾಲ್ಲೂಕು ತಹಸೀಲ್ದಾರರುಗಳ ಜೊತೆ ವಿ.ಸಿ. ಮೂಲಕ ಪರೀಕ್ಷಾ ಸಿದ್ಧತೆ ಬಗ್ಗೆ ಚರ್ಚಿಸಲಾಯಿತು. ಜಿಲ್ಲೆಯ ವಿವಿಧ ತಾಲ್ಲೂಕುಗಳ ತಹಸೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಕಾಲೇಜು ಪ್ರಾಂಶುಪಾಲರು, ಹಿರಿಯ ಉಪನ್ಯಾಸಕರು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.



