ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿಯವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ತಾಲ್ಲೂಕಿನ ಹುಲ್ಲೇಮನೆ ಕುಂದೂರು ಗ್ರಾಮದಲ್ಲಿ ಜರುಗಿದೆ. ಹುಲ್ಲೇಮನೆ ಕುಂದೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ರೈತಮಹಿಳೆ ಶೋಭಾ (45 ವರ್ಷ) ಕಾಡಾನೆ ದಾಳಿಯಿಂದ ಮೃತಪಟ್ಟಿದ್ದರು. ಘಟನೆಯಿಂದ ಉದ್ರಿಕ್ತರಾಗಿದ್ದ ಗ್ರಾಮಸ್ಥರು ಸರ್ಕಾರದ ಮತ್ತು ಅರಣ್ಯ ಇಲಾಖೆಯ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದರು. ಕೋಪೋದ್ರಿಕ್ತರಾಗಿದ್ದ ಹುಲ್ಲೇಮನೆ ಕುಂದೂರು ಮತ್ತು ಸುತ್ತಮುತ್ತಲ ಗ್ರಾಮದ ಸಾವಿರಾರು ಜನರು ಸ್ಥಳದಲ್ಲಿ ಜಮಾಯಿಸಿದ್ದರು. ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸುವವರೆಗೆ ಶವವನ್ನು ಮೇಲೆತ್ತಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದು ತೀವ್ರವಾಗಿ ಪ್ರತಿಭಟನೆ ನಡೆಸಿದ್ದರು.

ಈ ಸಂದರ್ಭದಲ್ಲಿ ಸ್ಥಳಕ್ಕಾಗಮಿಸಿದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಯವರ ಮೇಲೆ ಉದ್ರಿಕ್ತ ಜನರು ಮುಗಿಬಿದ್ದರು. ಸತತ ಕಾಡಾನೆ ದಾಳಿಯಿಂದ ಸಂತ್ರಸ್ತರಾಗಿದ್ದ ನೂರಾರು ಪುರುಷರು ಮಹಿಳೆಯರು ಶಾಸಕರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಸಕರ ಮೇಲೆ ಹಲ್ಲೆಗೆ ಮುಂದಾದರು. ಶಾಸಕರಿಗೆ ಪೊಲೀಸರು ರಕ್ಷಣೆ ನೀಡಲು ಹರಸಾಹಸಪಟ್ಟರು. ಪೊಲೀಸ್ ಜೀಪಿನಲ್ಲಿ ಶಾಸಕರನ್ನು ಕರೆದೊಯ್ಯಲು ಪ್ರಯತ್ನಿಸಿದಾಗ ಜನರು ಪೊಲೀಸ್ ಜೀಪಿಗೆ ಮುತ್ತಿಗೆ ಹಾಕಿದರು. ಪೊಲೀಸರ ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.
ಈ ನಡುವೆ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಈ ಭಾಗದಲ್ಲಿ ಜನರ ಪ್ರಾಣಹಾನಿಗೆ ಕಾರಣವಾಗುತ್ತಿರುವ ಕಾಡಾನೆಯನ್ನು ಹಿಡಿಯಲು ಮೌಖಿಕ ಭರವಸೆ ನೀಡಿದ ಮೇರೆಗೆ ಪ್ರತಿಭಟನೆಯನ್ನು ಕೈಬಿಟ್ಟು ಮೃತಶರೀರವನ್ನು ಶವಪರೀಕ್ಷೆಗೆ ಕೊಂಡೊಯ್ಯಲು ಅವಕಾಶ ನೀಡಲಾಗಿದೆ.



