ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಇದರಿಂದಾಗಿ ಅವರು ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಬುಧವಾರ ಶಾಸಕರು ಸೇರಿದಂತೆ 16 ಮಂದಿಯನ್ನು ದೋಷಿ ಎಂದು ತೀರ್ಪು ಪ್ರಕಟಿಸಿದ್ದ ಕೋರ್ಟ್ ಶುಕ್ರವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಜೀವವಾಧಿ ಶಿಕ್ಷೆಯ ಕೋರ್ಟ್ ಆದೇಶದಿಂದಾಗಿ ಜನಪ್ರತಿನಿಧಿಗಳ ಕಾಯ್ದೆಯ ಸೆಕ್ಷನ್ 8(4) ರ ಪ್ರಕಾರ ತಕ್ಷಣದಿಂದಲೇ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ರದ್ದಾಗಿದೆ.
ಜನಪ್ರತಿನಿಧಿ ಕಾಯ್ದೆ, 1951 ರ ಪ್ರಕಾರ ಯಾವುದೇ ಶಾಸಕ ಅಥವಾ ಸಂಸದರು ಕ್ರಿಮಿನಲ್ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿ, ಅವರಿಗೆ ನ್ಯಾಯಾಲಯವು ಕನಿಷ್ಠ 2 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಜೈಲು ಶಿಕ್ಷೆ ವಿಧಿಸಿದರೆ, ಅವರು ತಕ್ಷಣವೇ ತಮ್ಮ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ.
ಕೊಲೆ ಪ್ರಕರಣಗಳಲ್ಲಿ (ಐಪಿಸಿ ಸೆಕ್ಷನ್ 302 ಅಥವಾ ಬಿಎನ್‌ಎಸ್ ಸೆಕ್ಷನ್ 103) ಅಪರಾಧ ಸಾಬೀತಾದರೆ ಕನಿಷ್ಠ ಶಿಕ್ಷೆ ಜೀವಾವಧಿ ಕಾರಾಗೃಹ ವಾಸ ಅಥವಾ ಗರಿಷ್ಠ ಮರಣದಂಡನೆ ಆಗಿರುತ್ತದೆ. ಇದು 2 ವರ್ಷಗಳಿಗಿಂತ ಬಹಳ ಹೆಚ್ಚಿರುವುದರಿಂದ, ಕೊಲೆ ಪ್ರಕರಣದಲ್ಲಿ ದೋಷಿಯಾದ ತಕ್ಷಣ ಶಾಸಕ ಸ್ಥಾನ ರದ್ದಾಗುತ್ತದೆ. ಕೇವಲ ಶಾಸಕ ಸ್ಥಾನ ರದ್ದಾಗುವುದು ಮಾತ್ರವಲ್ಲ, ಅವರು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾದ ದಿನದಿಂದ ಮುಂದಿನ 6 ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ.
ಏನಿದು ಪ್ರಕರಣ ?
2016ರ ಜೂನ್ 15ರಂದು ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಅವರನ್ನು ಸಪ್ತಾಪುರ ಬಡಾವಣೆಯ ಜಿಮ್ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡದ ಉಪನಗರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆಯನ್ನು ನಡೆಸಿದ್ದರು. ಆಸ್ತಿ ವಿವಾದದ ವಿಚಾರಕ್ಕಾಗಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ, ಹತ್ಯೆಯಾದ ಯೋಗೇಶ್ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಈ ಪ್ರಕರಣವನ್ನು ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ವಹಿಸಿತ್ತು. ಬಳಿಕ ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂದು ಹೇಳಿತ್ತು. ಅಲ್ಲಿಂದ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು.
ಈ ಕೊಲೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಕೈವಾಡವಿರುವ ಅನುಮಾನ ವ್ಯಕ್ತವಾಗಿತ್ತು. 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು, ವಿನಯ್ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಇದರ ನಂತರ ವಿನಯ್ ಕುಲಕರ್ಣಿ ಜಾಮೀನು ಪಡೆದು ಹೊರಗೆ ಬಂದಿದ್ದರು. ನಂತರದಲ್ಲಿ ಈ ಪ್ರಕರಣವನ್ನು ಜನಪ್ರತಿನಿಧಿ ಕೋರ್ಟ್ಗೆ ನೀಡಲಾಗಿತ್ತು. ಇದೀಗ ಈ ಅವರಿಗೆ ಶಿಕ್ಷೆಯನ್ನು ಘೋಷಣೆ ಮಾಡಿದೆ.



