ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ತುಳಸಿ ಲೇಔಟ್‍ನಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾ ಒಕ್ಕಲಿಗರ ಮಹಿಳಾ ಭವನದ ಕಟ್ಟಡ ಉದ್ಘಾಟನಾ ಸಮಾರಂಭ ಜೂ.11 ರಂದು ಬೆಳಿಗ್ಗೆ 9-30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಒಕ್ಕಲಿಗರ ಮಹಿಳಾ ಘಟಕ ಅಧ್ಯಕ್ಷೆ ರೀನಾ ಸುಜೇದ್ರ ಹೇಳಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೂತನವಾಗಿ ನಿರ್ಮಿಸಿರುವ ಜಿಲ್ಲಾ ಒಕ್ಕಲಿಗರ ಮಹಿಳಾ ಭವನದ ಕಟ್ಟಡವನ್ನು ಜಗದ್ಗುರು ನಿರ್ಮಿಲಾನಂದ ಮಹಾಸ್ವಾಮಿ ಉದ್ಘಾಟಿಸಲಿದ್ದಾರೆ. ಕಟ್ಟಡ ಉದ್ಘಾಟನೆ ನಂತರ ಸಬಾ ಕಾರ್ಯಕ್ರಮವನ್ನು ವಿಜಯಪುರ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಬೆಳಿಗ್ಗೆ 10-30ಕ್ಕೆ ನಡೆಯಲಿದೆ ಎಂದರು.
ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಉಪಸ್ಥಿತರಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘದ ಅಧ್ಯಕ್ಷೆ ರೀನಾ ಸುಜೇಂದ್ರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಇಂಧನ ಸಚಿವ ಕೆ.ಜೆ.ಜಾರ್ಜ್, ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ಶಾಸಕರಾದ ಟಿ.ಡಿ.ರಾಜೇಗೌಡ, ಹೆಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್.ಭೋಜೇಗೌಡ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಒಕ್ಕಲಿಗರ ಮಹಿಳಾ ಭವನದ ಜಾಗದಲ್ಲಿ ಸುಮಾರು 5900 ಚದರ ಅಡಿಯಲ್ಲಿ ನೆಲಮಹಡಿ ಕಟ್ಟಡವನ್ನು ಮಹಿಳಾ ಸಂಘದ ಚಟುವಟಿಕೆಗಳಿಗೆ ದಾನಿಗಳ ಸಹಾಯದಿಂದ ರೂ. 90 ಲಕ್ಷದಲ್ಲಿ ಕಟ್ಟಡವನ್ನು ನಿರ್ಮಿಸಲಾಗಿದೆ. ಧನ ಸಹಾಯ ಮಾಡಿದ ಎಲ್ಲಾ ದಾನಿಗಳು ಮತ್ತು ಜನಪ್ರತಿನಿಧಿಗಳಿಗೆ ಧನ್ಯವಾದ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘದ ಕಾರ್ಯದರ್ಶಿ ಅಮಿತ ವಿಜೇಂದ್ರ, ಸಹ ಕಾರ್ಯದರ್ಶಿ ಕೋಮಲ ರವಿ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್, ನಿರ್ದೇಶಕಿ ಅನುಪಮ ರಮೇಶ್, ವೇದ ಚಂದ್ರಶೇಖರ್ ಉಪಸ್ಥಿತರಿದ್ದರು.



