ಪ್ರಕೃತಿಯನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಪರಿಸರ ಉಳಿದರೆ ಮಾತ್ರ ಮುಂದಿನ ಪೀಳಿಗೆಗೆ ಸುರಕ್ಷಿತ ಭವಿಷ್ಯ ನಿರ್ಮಿಸಲು ಸಾಧ್ಯ ಎಂದು ಶಾಸಕ ನಯನಾ ಮೋಟಮ್ಮ ಹೇಳಿದರು.
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಸೋಮವಾರ ಚಾರ್ಮಾಡಿ ಘಾಟ್‍ನಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಚಾರ್ಮಾಡಿ ಘಾಟ್ ಪಶ್ಚಿಮ ಘಟ್ಟದ ಪ್ರಮುಖ ಪರಿಸರ ಸೂಕ್ಷ್ಮ ಪ್ರದೇಶವಾಗಿದ್ದು, ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಪ್ರವಾಸಿಗರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಪರಿಸರದ ಸ್ವಚ್ಛತೆ ಕಾಪಾಡುವ ಜವಾಬ್ದಾರಿ ವಹಿಸಬೇಕು ಎಂದು ಹೇಳಿದರು.

ಪರಿಸರ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಇಲಾಖೆಗಳ ಜವಾಬ್ದಾರಿಯಲ್ಲ. ಸಾರ್ವಜನಿಕರ ಸಹಭಾಗಿತ್ವದಿಂದ ಮಾತ್ರ ಇಂತಹ ಅಭಿಯಾನಗಳು ಯಶಸ್ವಿಯಾಗಲು ಸಾಧ್ಯ. ಪ್ರಕೃತಿಯ ಸೌಂದರ್ಯವನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಕರೆ ನೀಡಿದರು.
ಸ್ವಚ್ಛತಾ ಕಾರ್ಯದಲ್ಲಿ ಇಒ ದಯಾವತಿ, ಪಂಚಾಯತ್ ಅಧಿಕಾರಿಗಳು,ಸಿಬ್ಬಂದಿ, ಪೊಲೀಸ್ ಇಲಾಖೆ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದ ವೇಳೆ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು. ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.



