ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ, ಮಾನವ ಕಳ್ಳ ಸಾಗಾಣೆ ಹಾಗೂ ಫೋಕೋ ಪ್ರಕರಣಗಳ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ ಎಂದು ಮೂಡಿಗೆರೆ ಪೊಲೀಸ್ ಠಾಣೆಯ ಪಿಎಸ್‌ಐ ಹರ್ಷವರ್ಧನ್ ಹೇಳಿದರು.
ಮೂಡಿಗೆರೆ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದ ಮಾದಕ ವಸ್ತುಗಳ ನಿಷೇಧ ಕಾಯ್ದೆ, ಪೋಸ್ಕೋ ಕಾಯ್ದೆ ಮತ್ತು ಮಾನವ ಕಳ್ಳ ಸಾಗಾಣೆ ನಿಯಂತ್ರಣ ಕಾಯ್ದೆ ಕುರಿತ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ ಅವರು ಮಾದಕ ವಸ್ತುಗಳ ಮಾರಾಟ, ಸೇವನೆ, ಮತ್ತು ಮಾನವ ಕಳ್ಳ ಸಾಗಾಣಿಕೆ ಬಗ್ಗೆ ತಿಳಿದಿದ್ದರೂ ಅದನ್ನು ಪೊಲೀಸರಿಗೆ ತಿಳಿಸದೆ ಔವ್ಯವಾಗಿಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಲ್ಲದೆ ಅದು ಅಕ್ರಮ ಚಟುವಟಿಕೆಗೆ ಪ್ರೋತ್ಸಾಹ ನೀಡಿದಂತೆಯೂ ಆಗಲಿದೆ. 18 ವರ್ಷ ವಯಸ್ಸಿಗೆ ಮುನ್ನ ಬಾಲಕಿಯರು ಸ್ವಯಂ ಇಚ್ಛೆಯಿಂದ ಮದುವೆಯಾದರೂ ಅದು ಫೋಕ್ಸೋ ಕಾಯ್ದೆಯ ವ್ಯಾಪ್ತಿಗೆ ಒಳಪಡುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಜಾಗ್ರತೆಯಿಂದ ಇರಬೇಕು. ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸರು ಮತ್ತು ಇತರೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಬೇಕು ಎಂದು ತಿಳಿಸಿದರು.
ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ಪೂಣೇಶ್ ಮಾತನಾಡಿ, ಮಾದಕ ವಸ್ತುಗಳ ಪೂರೈಕೆದಾರರು ಮತ್ತು ಮಾನವ ಕಳ್ಳ ಸಾಗಾಣೆದಾರರು ವಿದ್ಯಾರ್ಥಿಗಳನ್ನು ಅವಲಂಬಿಸಿ ಅಕ್ರಮ ಚಟುವಟಿಕೆಗಳನ್ನು ನಡೆಸುವ ಪ್ರಕರಣಗಳು ಸಾಕಷ್ಟು ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಕಾನೂನಿನ ಅರಿವು ಅಗತ್ಯವಿದೆ. ಪೊಲೀಸ್ ಅಧಿಕಾರಿಗಳು ನೀಡಿದ ಮಾಹಿತಿಯನ್ನು ಅರ್ಥೈಸಿಕೊಂಡು ಜವಾಬ್ದಾರಿಯಿಂದ ಉಲ್ಲಂಘನೆಯಂತಹ ಪ್ರಕರಣಗಳು ಕಂಡುಬಂದಲ್ಲಿ ವಿದ್ಯಾರ್ಥಿಗಳು ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು ಅಥವಾ ಪೊಲೀಸರಿಗೆ ವರ್ತಿಸಬೇಕು. ಕಾನೂನು ನೇರವಾಗಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಹಮ್ಮದ್ ಯಾಕೂಬ್ ಇದ್ದರು.


