ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‍ಐಆರ್) ಪ್ರಕ್ರಿಯೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಗತಿಯಲ್ಲಿದ್ದು, ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ತೆಗೆದುಹಾಕಲು ನಮೂನೆ 6, 6ಎ, 7 ಮತ್ತು 8 ಸಲ್ಲಿಸಲು ಸೆಪ್ಟೆಂಬರ್ 23ರವರೆಗೆ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದ್ದಾರೆ.

ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರಡು ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿರುವವರು, ತಿದ್ದುಪಡಿ ಬಯಸುವವರು ಹಾಗೂ ಹೊಸ ಮತದಾರರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 18 ವರ್ಷ ಪೂರ್ಣಗೊಳ್ಳುವ ಯುವಕ-ಯುವತಿಯರೂ ಸಹ ನಮೂನೆ-6 ರ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಹರಾಗಿದ್ದಾರೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಇಲ್ಲಿಯವರೆಗೆ ಒಟ್ಟು 26,468 ಅರ್ಜಿಗಳು ಸ್ವೀಕೃತವಾಗಿವೆ. ಸಾರ್ವಜನಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 19 ಮತ್ತು 20ರಂದು ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ವಿಶೇಷ ಶಿಬಿರಗಳನ್ನು ಏರ್ಪಡಿಸಲಾಗಿತ್ತು. ಮತಗಟ್ಟೆ ಮಟ್ಟದ ಅಧಿಕಾರಿಗಳು ಕೇಂದ್ರಗಳಲ್ಲಿ ಉಪಸ್ಥಿತರಿದ್ದು ಅರ್ಜಿಗಳನ್ನು ಸ್ವೀಕರಿಸಿದ್ದಾರೆ. ನಿನ್ನೆ ಒಂದೇ ದಿನ ಸುಮಾರು 1,500ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ.
ಸೆಪ್ಟೆಂಬರ್ 23ರೊಳಗೆ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಶೀಲಿಸಿ, ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಹೀಗಾಗಿ ಜಿಲ್ಲೆಯ ಮತದಾರರು ಹಾಗೂ ಯುವ ಜನತೆ ಕಾಲಾವಕಾಶವನ್ನು ಸದ್ಬಳಕೆ ಮಾಡಿಕೊಂಡು ನಿಗದಿತ ನಮೂನೆಗಳಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ.


