ಪೌರ ಕಾರ್ಮಿಕರು ಸ್ವಚ್ಛ ನಗರದ ರೂವಾರಿಗಳು. ಪ್ರತಿ ನಗರಗಳ ಸ್ವಚ್ಛತೆಯಲ್ಲಿ ಪೌರಕಾರ್ಮಿಕರ ಶ್ರಮ ತುಂಬಾ ಮಹತ್ವಪೂರ್ಣವಾದುದು. ಸ್ವಚ್ಛತಾ ಕಾರ್ಯದಲ್ಲಿ ನಿರಂತರವಾಗಿ ತೊಡಗಿಕೊಂಡಿರುವ ಪೌರ ಕಾರ್ಮಿಕರನ್ನು ಪ್ರತಿಯೊಬ್ಬರೂ ಗೌರವದಿಂದ ಕಾಣಬೇಕು ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.
ಚಿಕ್ಕಮಗಳೂರು ನಗರಸಭೆ ಆವರಣದಲ್ಲಿಂದು ನಡೆದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮನೆ ಮನೆಗಳಿಂದ ಕಸ ಸಂಗ್ರಹಿಸಿ ಕಸವನ್ನು ವಿಂಗಡಿಸಿ ಸೂಕ್ತ ಸ್ಥಳಕ್ಕೆ ಸಾಗಿಸುವುದು, ರಸ್ತೆಗಳು, ಮತ್ತು ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವುದು ಸೇರಿದಂತೆ ಹಲವು ರೀತಿಯ ಜವಾಬ್ದಾರಿಗಳನ್ನು ನಿರ್ವಹಿಸುವ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕುರಿತು ಹೆಚ್ಚು ನಿಗಾ ವಹಿಸಬೇಕು. ಪೌರ ಕಾರ್ಮಿಕರ ಬೆಳಗಿನ ಉಪಾಹಾರದ ದರವನ್ನು ರೂ.35 ರಿಂದ ರೂ.70ಕ್ಕೆ ಹೆಚ್ಚಿಸಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು ರೂ.2000 ಸಂಕಷ್ಟ ಭತ್ಯೆ ನೀಡಲಾಗುತ್ತಿದೆ ಎಂದ ಅವರು, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಹೇಳಿದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೆಗೌಡ ಮಾತನಾಡಿ, ಪೌರ ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣದ ಕುರಿತು ಹೆಚ್ಚು ಗಮನಹರಿಸಬೇಕು ಹಾಗೂ ಯಾವುದೇ ವ್ಯಸನಗಳಿಗೆ ದಾಸರಾಗದೇ ಆರ್ಥಿಕವಾಗಿ ಸಧೃಡರಾಗಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಕಾಯಕವೇ ಕೈಲಾಸ, ಪ್ರತಿಯೊಂದು ವೃತ್ತಿಯೂ ಗೌರವಯುತವಾದುದು. ನಗರ ಹಾಗೂ ಗ್ರಾಮೀಣ ಪ್ರದೇಶಗಳ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಬಹುಮುಖ್ಯವಾದುದು. ಸ್ವಚ್ಛತಾ ಕಾರ್ಯವನ್ನು ಮಾತೃ ಹೃದಯದಿಂದ ನಿರ್ವಹಿಸುವ ಪೌರ ಕಾರ್ಮಿಕರ ಕೆಲಸವನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದರು.
ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳುವುದು ಪ್ರತಿಯೊಬ್ಬ ಸಾರ್ವಜನಿಕರ ಕರ್ತವ್ಯ. ಉತ್ತಮ ಪರಿಸರದಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ. ಇಂತಹ ಸಚ್ಛತಾ ಕಾರ್ಯದಲ್ಲಿ ತೊಡಗಿಕೊಂಡಿರುವ ಪೌರ ಕಾರ್ಮಿಕರು ಉಚಿತ ಆರೋಗ್ಯ ತಪಾಸಣೆಯಲ್ಲಿ ಭಾಗಿಯಾಗಿ ತಮ್ಮ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಿ ಎಂದರು.
ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಮಾತನಾಡಿ, ನೇರ ಪಾವತಿಯಿಂದ ನೇರ ನೇಮಕಾತಿ ಪೌರ ಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಸ್ವೀಕರಿಸಲಾಗಿದೆ. ಶೀಘ್ರದಲ್ಲಿ ನೇಮಕಾತಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲು ಕ್ರಮ ವಹಿಸಲಾಗುವುದು. ಪೌರ ಕಾರ್ಮಿಕರು ನಗರ ಸ್ಥಳೀಯ ಸಂಸ್ಥೆಗಳಿಂದ ಕೊಡಲಾಗುವ ಸೌಲಭ್ಯಗಳನ್ನು ಉತ್ತಮ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಪೌರ ಕಾರ್ಮಿಕರ ದಿನಾಚರಣೆಯ ಅಂಗವಾಗಿ ನಗರಸಭೆ ವತಿಯಿಂದ ಪೌರ ಕಾರ್ಮಿಕರು ಹಾಗೂ ನೌಕರರಿಗೆ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಹಾಗೂ ನಿವೃತ್ತ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.
ನಗರಸಭೆ ಪೌರಾಯುಕ್ತ ಬಿ.ಸಿ.ಬಸವರಾಜ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಭವ್ಯ ಮಂಜುನಾಥ್, ಉಪಾಧ್ಯಕ್ಷೆ ಲಲಿತ ರವಿನಾಯ್ಕ್, ಡಿ.ಯು.ಡಿ.ಸಿ. ಯೋಜನಾ ನಿರ್ದೇಶಕ ಗೋಪಾಲ್ ಜಾದವ್ ಸೇರಿದಂತೆ ನಗರಸಭೆ ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.


