ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಸಮಾಧಾನದ ಪರಿಹಾರ ನೀಡುವ ಸಲುವಾಗಿ ಸರ್ಕಾರದ ಆದ್ಯತೆಯ ತೀರ್ಮಾನದ ಅನ್ವಯ ಅಕ್ಟೋಬರ್ 3 ರಂದು ಬೆಳಿಗ್ಗೆ 11 ಗಂಟೆಗೆ ಇಂಧನ, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಮತ್ತು ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗ ಮಂದಿರದಲ್ಲಿ ಪ್ರಜಾ ಸೇವಾ ಆಂದೋಲನ ಸಭೆ ನಡೆಯಲಿದೆ.
ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಮನವಿ ಸಲ್ಲಿಸಬಹುದು. ಸಭೆ ನಡೆಯುವ ಸ್ಥಳಗಳಲ್ಲಿ ಇಲಾಖಾವಾರು ವಿಶೇಷ ಕೌಂಟರ್ ಗಳನ್ನು ಸ್ಥಾಪಿಸಲಾಗುವುದು.
ಸಾರ್ವಜನಿಕರು ಸಲ್ಲಿಸುವ ಎಲ್ಲಾ ಅರ್ಜಿಗಳಿಗೆ ಸ್ಥಳದಲ್ಲಿಯೇ ಆನ್‍ಲೈನ್ (<https://ipgrs.karnataka.gov.in>) ಪೋರ್ಟಲ್‍ನಲ್ಲಿ ಅಪ್‍ಲೋಡ್ ಮಾಡಿ ವಿಶಿಷ್ಟ ಸಂಖ್ಯೆ ಇರುವ ಆನ್‍ಲೈನ್ ಸ್ವೀಕೃತಿ ಪತ್ರವನ್ನು ನೀಡಲಾಗುವುದು.
ಸಾರ್ವಜನಿಕರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


