ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಕನಸಿಗೆ ಬೆಲೆ ಸಿಗಬೇಕಾದರೆ ದೇಶದಲ್ಲಿ ಏಕತೆ, ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯವಾಗಿದೆ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.
ಅವರು ಶುಕ್ರವಾರ ಪಟ್ಟಣದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಾತ್ಮ ಗಾಂಧೀಜಿ ಅವರು ಸತ್ಯ ಮತ್ತು ಅಹಿಂಸೆಯ ಮಾರ್ಗದ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕು ನೀಡಿದರು. ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶದ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ರೈತರಲ್ಲಿ ಆತ್ಮವಿಶ್ವಾಸ ಮೂಡಿಸಿದರು. ಇಂತಹ ಮಹನೀಯರ ತ್ಯಾಗ, ಹೋರಾಟ ಹಾಗೂ ಸೇವೆಯ ಫಲವಾಗಿ ಇಂದು ದೇಶ ಸ್ವಾತಂತ್ರ್ಯ ಪಡೆದು ಮುನ್ನಡೆಯುತ್ತಿದೆ ಎಂದು ಹೇಳಿದರು.
ಎಲ್ಲ ಧರ್ಮಗಳು ಶಾಂತಿ ಹಾಗೂ ಸಹಬಾಳ್ವೆಯ ಸಂದೇಶ ಸಾರುತ್ತಿದ್ದರೂ ಸಮಾಜದಲ್ಲಿ ಅಶಾಂತಿ ಮತ್ತು ಭಿನ್ನಾಭಿಪ್ರಾಯಗಳು ಕಂಡುಬರುತ್ತಿವೆ. ದೇಶಕ್ಕೆ ಸ್ವಾತಂತ್ರ್ಯ ದೊರೆತು 80 ವರ್ಷ ಕಳೆದರೂ ಮಹಿಳೆಯರಿಗೆ ಸಂಪೂರ್ಣ ಸ್ವಾತಂತ್ರ್ಯ ಮತ್ತು ಸಮಾನ ಅವಕಾಶಗಳು ದೊರೆತಿಲ್ಲ. ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳು ಆತಂಕ ಮೂಡಿಸುತ್ತಿವೆ. ಮಹಿಳೆಯರು ನಿರ್ಭಯವಾಗಿ ಬದುಕುವ ವಾತಾವರಣ ನಿರ್ಮಾಣವಾಗಬೇಕಿದ್ದು, ಅವರ ಹಕ್ಕು ಮತ್ತು ಸ್ವಾತಂತ್ರ್ಯಕ್ಕಾಗಿ ಸಮಾಜದಲ್ಲಿ ಮತ್ತೊಂದು ಬದಲಾವಣೆಯ ಅಗತ್ಯವಿದೆ ಎಂದು ಹೇಳಿದರು.
ವೇಣುಗೋಪಾಲ ಸ್ವಾಮಿ ದೇವಸ್ಥಾನನ ಅರ್ಚಕ ಮಹಬಲ ಕಾರಂತ ಅವರು ಭಗವದ್‍ಗೀತೆ ಬಗ್ಗೆ, ಚಕಮಕ್ಕಿ ಮಸೀದಿ ಧರ್ಮಗುರು ಸಿನಾನ್ ಫೈಝಿ ಖಲಂದರ್ ಅವರು ಕುರಾನ್ ಬಗ್ಗೆ, ಸೆಂಟ್ ಮಾರ್ಥಾಸ್ ಶಾಲೆಯ ಡೀನ್ ಸಿಸ್ಟರ್ ಬೈಬಲ್ ಬಗ್ಗೆ ಪಠಣ ಮಾಡಿದರು.
ತಹಸೀಲ್ದಾರ್ ಎಸ್.ಅಶ್ವಿನಿ, ತಾ.ಪಂ. ಇಒ ದಯಾವತಿ ಸೇರಿದಂತೆ ವಿವಿಧ ಸಂಘ ಸಂಸ್ಥೆ ಮುಖಂಡರು, ಅಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು.


