ಕೊಪ್ಪಳದ ಗವಿಮಠದ ಪೀಠಾಧಿಪತಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಭಾನುವಾರ ಮಧ್ಯಾಹ್ನ 12.07ಕ್ಕೆ ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಿಗೆ ದೀಪ ಬೆಳಗಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ 2026ಕ್ಕೆ ಚಾಲನೆ ನೀಡಿದರು.
ದಸರಾ ಉತ್ಸವಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಗವಿಸಿದ್ದೇಶ್ವರ ಸ್ವಾಮೀಜಿಯವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದರು.
ಮೊದಲ ಬಾರಿಗೆ ವಿವಿಧ ಮಠಗಳ 200ಕ್ಕೂ ಹೆಚ್ಚು ಮಠಾಧೀಶರು ಹಾಗೂ ಸಿಖ್ ಮತ್ತು ಟಿಬೆಟಿಯನ್ ಧಾರ್ಮಿಕ ಮುಖಂಡರು ಸೇರಿದಂತೆ ವಿವಿಧ ಧರ್ಮಗಳ ಮುಖ್ಯಸ್ಥರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಇವರಿಗಾಗಿ ವಿಶೇಷ ಎತ್ತರದ ವೇದಿಕೆಯಲ್ಲಿ ಆಸನ ವ್ಯವಸ್ಥೆ ಕಲ್ಪಿಸಿ ಗೌರವ ಸಲ್ಲಿಸಲಾಯಿತು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ, ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಸಚಿವ ರಿಜ್ವಾನ್ ಅರ್ಷದ್, ಮಾಜಿ ಸಚಿವರಾದ ಎಚ್.ಸಿ. ಮಹದೇವಪ್ಪ ಮತ್ತು ಕೆ. ವೆಂಕಟೇಶ್, ಶಾಸಕರಾದ ಜಿ.ಟಿ. ದೇವೇಗೌಡ, ಟಿ.ಎಸ್. ಶ್ರೀವತ್ಸ, ತನ್ವೀರ್ ಸೇಠ್, ರವಿಶಂಕರ್, ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ, ಕೆ. ಹರೀಶ್ ಗೌಡ, ಸಂಸದ ಸುನಿಲ್ ಬೋಸ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಿವಕುಮಾರ್ ಮತ್ತು ಸಿ.ಎನ್. ಮಂಜೇಗೌಡ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಗವಿಮಠದ ಸ್ವಾಮೀಜಿ ಹಾಗೂ ಪತ್ನಿಯೊಂದಿಗೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಮಂಗಳವಾದ್ಯಗಳ ನಾದದ ನಡುವೆ ಪೂಜಾ ಕುಣಿತ ಮತ್ತು ವೀರಗಾಸೆ ಸೇರಿದಂತೆ ವಿವಿಧ ಜನಪದ ಕಲಾತಂಡಗಳು ಅವರಿಗೆ ವಿಶೇಷ ಸ್ವಾಗತ ಕೋರಿದವು.
ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಅಪರ ಜಿಲ್ಲಾಧಿಕಾರಿ ಐಶ್ವರ್ಯ, ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ, ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಶ್ರೀ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಉಕೇಶ್ ಕುಮಾರ್ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ. ಸವಿತಾ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.


