ಪಡಿತರ ಚೀಟಿದಾರರಿಗೆ ಇ-ಕೆವೈಸಿ (e-KYC) ಮಾಡಿಸಲು ನೀಡಲಾಗಿದ್ದ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ನವೆಂಬರ್ 10 ಕೊನೆಯ ದಿನವಾಗಿತ್ತು. ಫಲಾನುಭವಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಗಡುವು ವಿಸ್ತರಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಇ-ಕೆವೈಸಿ ಮಾಡಿಸಲು ಫಲಾನುಭವಿಗಳಿಗೆ ಎರಡು ಆಯ್ಕೆಗಳಿವೆ. ಮನೆಯಲ್ಲೇ ಕುಳಿತು ಅನ್ನಸೇವೆ ಆ್ಯಪ್ ಮೂಲಕ ಮೊಬೈಲ್‌ನಲ್ಲೇ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಇಲ್ಲವೇ ಸಮೀಪದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ನಿಗದಿತ ಗಡುವಿನೊಳಗೆ ಎಲ್ಲರೂ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಇಲಾಖೆ ಮನವಿ ಮಾಡಿದೆ.
ನ್ಯಾಯಬೆಲೆ ಅಂಗಡಿಗಳ ಮುಂದೆ ಸರದಿಯಲ್ಲಿ ನಿಲ್ಲುವುದನ್ನು ತಪ್ಪಿಸುವ ಉದ್ದೇಶದಿಂದ ಆಹಾರ ಇಲಾಖೆ ಅನ್ನಸೇವೆ ಆ್ಯಪ್ ಸೌಲಭ್ಯವನ್ನು ರಾಜ್ಯದ ಎಲ್ಲ 31 ಜಿಲ್ಲೆಗಳಿಗೂ ವಿಸ್ತರಿಸಿದೆ. ಕೇಂದ್ರ ಸರ್ಕಾರದ ನಿಯಮದಂತೆ ಪ್ರತಿ ಐದು ವರ್ಷಕ್ಕೊಮ್ಮೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.
ಹಿರಿಯ ನಾಗರಿಕರು ಮತ್ತು ಮಕ್ಕಳ ಅನುಕೂಲಕ್ಕಾಗಿ ಮುಖ ಗುರುತಿಸುವಿಕೆ ಮೂಲಕ ದೃಢೀಕರಣ ಮಾಡುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಉದ್ಯೋಗ ಸೇರಿದಂತೆ ವಿವಿಧ ಕಾರಣಗಳಿಗಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗಿರುವವರು ಇ-ಕೆವೈಸಿಗಾಗಿ ತಮ್ಮ ಊರಿಗೆ ಹಿಂದಿರುಗುವ ಅನಿವಾರ್ಯತೆಯನ್ನೂ ಈ ಸೌಲಭ್ಯ ತಪ್ಪಿಸಲಿದೆ.


