ದೇಶದ ಬಡವರು, ರೈತರು, ಕಾರ್ಮಿಕರು, ಮಹಿಳೆಯರು, ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಏಕೈಕ ಪಕ್ಷ ಕಾಂಗ್ರೆಸ್. ಬಿಜೆಪಿ ಶ್ರೀಮಂತರು ಮತ್ತು ಕಾರ್ಪೊರೇಟ್ ಉದ್ಯಮಿಗಳ ಪರವಾಗಿ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕನ್ನು ಸುಧಾರಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಚಿಕ್ಕಮಗಳೂರಿನಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಮಂಜೇಗೌಡರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಸ್ವಾತಂತ್ರ್ಯ ಹೋರಾಟದ ಕೊಡುಗೆ, ಕೇಂದ್ರ ಸರ್ಕಾರದ ಆಡಳಿತ ವೈಫಲ್ಯಗಳು ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆಗಳ ಕುರಿತು ಸ್ಮರಿಸಿದರು.
ಚಿಕ್ಕಮಗಳೂರು ಜಿಲ್ಲೆಗೂ ಇಂದಿರಾ ಗಾಂಧಿಯವರಿಗೂ ಅವಿನಾಭಾವ ಸಂಬಂಧವಿದೆ. ಈ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಇಂದಿರಾ ಗಾಂಧಿ ಅವರನ್ನು ಚಿಕ್ಕಮಗಳೂರಿನ ಜನರು ಎಂದಿಗೂ ಮರೆಯಲು ಸಾಧ್ಯವಿಲ್ಲ. 1978ರಲ್ಲಿ ಮೋಟಮ್ಮನವರ ವಿವಾಹ ಸಮಾರಂಭದಲ್ಲಿಯೂ ಇಂದಿರಾ ಗಾಂಧಿಯವರು ಭಾಗವಹಿಸಿದ್ದರು. ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು, 20 ಅಂಶಗಳ ಕಾರ್ಯಕ್ರಮ ಹಾಗೂ ‘ಗರೀಬಿ ಹಟಾವೋ’ ಘೋಷಣೆಯ ಮೂಲಕ ಬಡತನ ನಿರ್ಮೂಲನೆಗೆ ಆದ್ಯತೆ ನೀಡಿದ್ದರು ಎಂದು ನೆನೆದರು.
ಆಧುನಿಕ ಭಾರತದ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರು. ಮಹಾತ್ಮ ಗಾಂಧಿ, ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅನೇಕ ಮಹನೀಯರ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಮಹತ್ವದ ಪಾತ್ರ ವಹಿಸಿದೆ. ಆದರೆ ಆರ್ಎಸ್ಎಸ್, ಜನಸಂಘ ಹಾಗೂ ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ. ದೇಶದ ಸ್ವಾತಂತ್ರ್ಯ ಮತ್ತು ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿರುವ ನೆಹರು ಕುಟುಂಬವನ್ನು ಕಂಡರೆ ಬಿಜೆಪಿಯವರಿಗೆ ಹೊಟ್ಟೆಕಿಚ್ಚು ಎಂದು ಟೀಕಿಸಿದರು.
ನರೇಂದ್ರ ಮೋದಿ ಅವರು 2014ರಲ್ಲಿ ಪ್ರಧಾನಮಂತ್ರಿಯಾದ ನಂತರ ದೇಶದ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ‘ಅಚ್ಛೇ ದಿನ್’ ಹಾಗೂ ಗುಜರಾತ್ ಮಾದರಿಯ ಅಭಿವೃದ್ಧಿಯ ಭರವಸೆಗಳು ಹುಸಿಯಾಗಿವೆ. ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ದೇಶದ ಸಾಲ 53 ಲಕ್ಷ ಕೋಟಿ ಇತ್ತು. ಈಗ ಅದು ?200 ಲಕ್ಷ ಕೋಟಿಗೆ ಏರಿಕೆಯಾಗಿದೆ. ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹಾಗೂ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದ ಭರವಸೆಗಳೂ ಈಡೇರಿಲ್ಲ. ಹನ್ನೆರಡು ವರ್ಷಗಳಲ್ಲಿ 24 ಕೋಟಿ ಉದ್ಯೋಗಗಳನ್ನು ಸೃಷ್ಟಿಸಬೇಕಾಗಿತ್ತು. ಆದರೆ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಎಂದು ಆರೋಪಿಸಿದರು.
ಕರ್ನಾಟಕದ 240 ತಾಲೂಕುಗಳ ಪೈಕಿ 224 ತಾಲೂಕುಗಳಲ್ಲಿ ಭೀಕರ ಬರಗಾಲ ಉಂಟಾಗಿದೆ. ಚಿಕ್ಕಮಗಳೂರು ಸೇರಿದಂತೆ ಮಲೆನಾಡಿನ ಪ್ರದೇಶಗಳೂ ಬರದಿಂದ ತತ್ತರಿಸಿವೆ. ರಾಜ್ಯಕ್ಕೆ ಸುಮಾರು 60 ಸಾವಿರದಿಂದ ?62 ಸಾವಿರ ಕೋಟಿ ನಷ್ಟ ಸಂಭವಿಸಿದ್ದು, ಎನ್ಡಿಆರ್ಎಫ್ ಮಾನದಂಡಗಳ ಪ್ರಕಾರ ಸುಮಾರು ?21 ಸಾವಿರ ಕೋಟಿ ಪರಿಹಾರಕ್ಕೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೂ ಕೇಂದ್ರ ಸರ್ಕಾರ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ. 2023ರಲ್ಲಿ ಬರ ಪರಿಹಾರ ಪಡೆಯಲು ನ್ಯಾಯಾಲಯದ ಮೊರೆ ಹೋಗಬೇಕಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
2023-24ರ ಕೇಂದ್ರ ಬಜೆಟ್ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300 ಕೋಟಿ ನೀಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದರು. ಆದರೆ ಇದುವರೆಗೂ ಐದು ಪೈಸೆಯನ್ನೂ ಬಿಡುಗಡೆ ಮಾಡಿಲ್ಲ. ಕರ್ನಾಟಕದ ರೈತರು ಮತ್ತು ನೀರಾವರಿ ಯೋಜನೆಗಳ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರಂತರ ಅನ್ಯಾಯ ಮಾಡುತ್ತಿದೆ ಎಂದು ಕಿಡಿಕಾರಿದರು.

ಸಮಾಜದಲ್ಲಿರುವ ಜಾತಿ, ವರ್ಗ ಮತ್ತು ಆರ್ಥಿಕ ಅಸಮಾನತೆ ನಿವಾರಣೆಯಾಗದೆ ಸಮಸಮಾಜ ನಿರ್ಮಾಣ ಸಾಧ್ಯವಿಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಬಸವಣ್ಣನವರು ಸಮಾನತೆಯ ಸಮಾಜ ನಿರ್ಮಾಣದ ಸಂದೇಶ ನೀಡಿದ್ದರು. ಈ ಆಶಯದಂತೆ ಬಡವರು, ಮಹಿಳೆಯರು ಮತ್ತು ಯುವಜನರ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಕಡಿಮೆ ಮಾಡುವುದು ಈ ಯೋಜನೆಗಳ ಉದ್ದೇಶವಾಗಿದೆ ಎಂದು ವಿವರಿಸಿದರು.
ಕಾಂಗ್ರೆಸ್ ಎಲ್ಲ ಜಾತಿ, ಧರ್ಮ ಮತ್ತು ಸಮುದಾಯಗಳನ್ನು ಒಗ್ಗೂಡಿಸುವ ಪಕ್ಷವಾಗಿದೆ. ಬಿಜೆಪಿ ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷದ ಬೀಜ ಬಿತ್ತುತ್ತಿದ್ದರೆ, ಕಾಂಗ್ರೆಸ್ ಪ್ರೀತಿ, ವಿಶ್ವಾಸ ಮತ್ತು ಸಹೋದರತ್ವವನ್ನು ಬೆಳೆಸುತ್ತದೆ. ಪ್ರತಿಯೊಬ್ಬ ಕಾರ್ಯಕರ್ತರೂ ಕಾಂಗ್ರೆಸ್ ಸಿದ್ಧಾಂತವನ್ನು ಅರಿತು ಜನರಿಗೆ ತಲುಪಿಸಬೇಕು ಎಂದು ಕರೆ ನೀಡಿದರು.
ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳವಾಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಕರ್ನಾಟಕದಲ್ಲಿ ಸುಮಾರು ಒಂದು ಕೋಟಿ ಮತದಾರರ ಹೆಸರುಗಳು ಕಡಿತವಾಗಿದೆ ಎಂದು ಆರೋಪಿಸಿದರು. ಮೃತರ ಹೆಸರುಗಳನ್ನು ತೆಗೆದುಹಾಕುವುದಕ್ಕೆ ಆಕ್ಷೇಪವಿಲ್ಲ. ಆದರೆ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ರಾಹುಲ್ ಗಾಂಧಿಯವರು ‘ವೋಟ್ ಚೋರಿ’ ವಿರುದ್ಧ ದೇಶಾದ್ಯಂತ ಹೋರಾಟ ನಡೆಸುತ್ತಿದ್ದು, ಪ್ರತಿಯೊಬ್ಬ ಅರ್ಹ ಮತದಾರನ ಮತದಾನದ ಹಕ್ಕನ್ನು ರಕ್ಷಿಸಲು ಕಾರ್ಯಕರ್ತರು ಎಚ್ಚರಿಕೆ ವಹಿಸಬೇಕು ಎಂದರು.
ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಏಳು ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಅಂಶುಮಂತ್ ಅವರ ಪಕ್ಷ ಸಂಘಟನಾ ಸೇವೆಯನ್ನು ಶ್ಲಾಘಿಸಿದರು. ಅವರ ಅವಧಿಯಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ಗೆಲುವಿಗೆ ಕಾರಣರಾದ ಜಿಲ್ಲೆಯ ಜನತೆಗೆ ಕೃತಜ್ಞತೆ ಸಲ್ಲಿಸಿದರು.
ನೂತನ ಅಧ್ಯಕ್ಷ ಮಂಜೇಗೌಡ ಅವರು ಗ್ರಾಮ ಪಂಚಾಯಿತಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಅವರ ನೇತೃತ್ವದಲ್ಲಿ ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಕಾರ್ಯಕರ್ತರಿಗೆ ಅಧಿಕಾರ ಮತ್ತು ಜನಸೇವೆ ಮಾಡುವ ಅವಕಾಶ ಕಲ್ಪಿಸುತ್ತವೆ. ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಹೇಳಿದರು.
ಚಿಕ್ಕಮಗಳೂರು ಶಾಸಕ ತಮ್ಮಯ್ಯ ಅವರು 2028ರ ವಿಧಾನಸಭಾ ಚುನಾವಣೆಯಲ್ಲಿಯೂ ಗೆಲುವು ಸಾಧಿಸಬೇಕು. ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಲಿಷ್ಠವಾಗಬೇಕು. ಬಿಜೆಪಿ ಮತ್ತು ಜೆಡಿಎಸ್ ನಾಯಕರು ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಆದರೆ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಿ ಅವರ ಕನಸನ್ನು ಹುಸಿಗೊಳಿಸಬೇಕು ಎಂದು ಕರೆ ನೀಡಿದರು.
2029ರಲ್ಲಿ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿಯಾಗುವಂತೆ ಮಾಡುವುದು ಕಾಂಗ್ರೆಸ್ ಕಾರ್ಯಕರ್ತರ ಗುರಿಯಾಗಬೇಕು. ತಾವು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ ಸಿದ್ದರಾಮಯ್ಯ ಅವರು, ರಾಹುಲ್ ಗಾಂಧಿಯವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಲು ಎಲ್ಲರೂ ಟೊಂಕಕಟ್ಟಿ ನಿಲ್ಲಬೇಕು ಎಂದು ಹೇಳಿದರು.
ಕೊನೆಯದಾಗಿ, ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಅವರಿಗೆ ಅಭಿನಂದನೆ ಸಲ್ಲಿಸಿ, ನಿರ್ಗಮಿತ ಅಧ್ಯಕ್ಷ ಅಂಶುಮಂತ್ ಅವರಿಗೆ ಧನ್ಯವಾದ ಅರ್ಪಿಸಿದ ಅವರು, ಮುಂದಿನ ಎಲ್ಲ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಒಗ್ಗಟ್ಟಿನಿಂದ ಶ್ರಮಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಚಿವ ರಿಜ್ವಾನ್ ಅರ್ಷದ್ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ಹಿರಿಯ ಮುಖಂಡರುಗಳು, ಮಾಜಿ ಸಚಿವರು, ಶಾಸಕರುಗಳು, ಮಾಜಿ ಜಿಲ್ಲಾ ಅಧ್ಯಕ್ಷರುಗಳು ಉಪಸ್ಥಿತರಿದ್ದರು.



