ಬಡವರ ಬದುಕನ್ನು ಕಟ್ಟಿಕೊಡುವುದು ಎಷ್ಟು ಮುಖ್ಯವೋ, ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೂ ಅಷ್ಟೇ ಆದ್ಯತೆ ನೀಡುವುದು ಸರ್ಕಾರದ ಉದ್ದೇಶವಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.
ಚಿಕ್ಕಮಗಳೂರು ತಾಲ್ಲೂಕಿನ ಜಾಗರ ಹೋಬಳಿಯ ಮೇಲುಹುಲುವತ್ತಿ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಜನರ ಮೂಲಭೂತ ಅಗತ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಗ್ರಾಮ ಪಂಚಾಯಿತಿ ಕಟ್ಟಡವೂ ಅಗತ್ಯವೇ ಆಗಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಆಡಳಿತ ವ್ಯವಸ್ಥೆ ನಿರ್ಮಾಣವಾಗಬೇಕು ಎಂದರು.
ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾ ಣಕ್ಕೆ ಶ್ರಮಿಸಿದ ಅಧ್ಯಕ್ಷ ಜಾನಕಿರಾಮ್ ಅವರ ಕಾರ್ಯವನ್ನು ಶ್ಲಾಘಿಸಿದ ಅವರು, ಯಾವುದೇ ಕೆಲಸವನ್ನು ಕೈಗೆತ್ತಿ ಕೊಂಡರೆ ಅದನ್ನು ಪೂರ್ಣಗೊಳಿಸುವ ಛಲ ಜಾನಕಿರಾಮ್ ಅವರಲ್ಲಿದೆ. ಗ್ರಾಮ ಪಂಚಾಯಿತಿಗೆ ಸ್ವಂತ ಕಟ್ಟಡ ನಿರ್ಮಿಸಬೇಕೆಂಬ ಉದ್ದೇಶದಿಂದ ಅವರು ನಿರಂತರ ಪ್ರಯತ್ನ ನಡೆಸಿದರು. ಕಟ್ಟಡ ನಿರ್ಮಾಣಕ್ಕೆ ಉದ್ದೇಶಿಸಿದ್ದ ಜಾಗದಲ್ಲಿ ಅರಣ್ಯ ಇಲಾಖೆಯ ಮರಗಳು ಹಾಗೂ ಇತರೆ ಅಡೆತಡೆಗಳಿದ್ದವು. ಅವುಗಳನ್ನು ನಿವಾರಿಸಿ ಕಾಮಗಾರಿ ಆರಂಭಿಸಲು ಪ್ರಯತ್ನಿಸಿದರು. ಆರಂಭದಲ್ಲಿ ನರೇಗಾ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಳ್ಳ ಲಾಗಿದ್ದು, ದಾನಿಗಳ ಸಹಕಾರದಿಂದ ಕಟ್ಟಡ ಪೂರ್ಣಗೊಂಡಿದೆ ಎಂದರು.
ಕಟ್ಟಡ ನಿರ್ಮಾಣಕ್ಕೆ ಕೆಲಚಂದ್ರ ಗ್ರೂಪ್ಸ್ ವತಿಯಿಂದ 25 ಲಕ್ಷ ರೂ. ಹಾಗೂ ಆಯುಷ್ಠಾನ್ ಎಸ್ಟೇಟ್ ವತಿ ಯಿಂದ 5 ಲಕ್ಷ ರೂ. ನೆರವು ದೊರೆತಿದೆ. ಶಾಸಕರ ನಿಧಿಯಿಂದ 10 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದ್ದು, ಅನುದಾನ ಬಿಡುಗಡೆಯಾದ ತಕ್ಷಣ ನೀಡಲಾಗುವುದು ಎಂದು ತಿಳಿಸಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಚುನಾವಣಾ ಪೂರ್ವದಲ್ಲಿ ಘೋಷಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿ ಸಿದೆ. ವರ್ಷಕ್ಕೆ ಸುಮಾರು 53 ಸಾವಿರ ಕೋಟಿ ರೂ. ಅನುದಾನವನ್ನು ಈ ಯೋಜನೆಗಳಿಗೆ ಮೀಸಲಿಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡಲಾ ಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ ಬಡ ಕುಟುಂಬಗಳಿಗೆ ಅಕ್ಕಿ ಒದಗಿಸುವ ಮೂಲಕ ಆರ್ಥಿಕವಾಗಿ ಹಿಂದುಳಿದವರ ನೆರವಿಗೆ ಸರ್ಕಾರ ಧಾವಿಸಿದೆ ಎಂದರು.
ಜಾಗರ ಹೋಬಳಿಯ ಮೇಲುವತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿಗೆ 10 ಕೋಟಿಗೂ ಅಧಿಕ ಅನುದಾನ ನೀಡಲಾಗಿದೆ. ಗ್ರಾಮ ಪಂಚಾಯಿತಿ ಕಚೇರಿಗೆ ಸಂಪರ್ಕ ಕಲ್ಪಿಸುವ ಕಾಂಕ್ರೀಟ್ ರಸ್ತೆ ಹಾಗೂ ಸೇತುವೆ ನಿರ್ಮಿಸಲಾಗಿದೆ. ಜಾಗರದಿಂದ ಮೇಲುಹುಲುವತ್ತಿವರೆಗೆ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗಿದೆ. ಹುಲುವತ್ತಿ ಗ್ರಾಮದ ರಸ್ತೆ ಕಾಮಗಾರಿಗೆ 50 ಲಕ್ಷ ರೂ. ಅನುದಾನದಲ್ಲಿ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಲಾಗಿದೆ.
ನೆತ್ತಿಚೌಕದವರೆಗೆ ಮೂರು ಕೋಟಿ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದ್ದು, ಮುಂದಿನ ಹಂತದಲ್ಲಿ 3.60 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಪಡಿಸಿ ನೆತ್ತಿಚೌಕದವರೆಗೆ ಸಂಪರ್ಕ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಮಲೆನಾಡಿನ ಜನರ ಬದುಕು ಮತ್ತು ಪರಿಸರ ಸಂರಕ್ಷಣೆ ಎರಡೂ ಮುಖ್ಯವಾಗಿವೆ. ಇಲ್ಲಿನ ಜನರು ಪ್ರಕೃತಿಯೊಂದಿಗೆ ಬೆರೆತು ಬದುಕುತ್ತಿದ್ದು, ಪರಿಸರ ರಕ್ಷಣೆಯಲ್ಲಿ ಅವರ ಪಾತ್ರವೂ ಮಹತ್ವದ್ದಾಗಿದೆ. ಕಸ್ತೂರಿರಂಗನ್ ವರದಿ ಜಾರಿಯಿಂದ ಮಲೆನಾಡಿನ ಜನರಿಗೆ ತೊಂದರೆಯಾಗುವ ಆತಂಕ ಎದುರಾ ದಾಗ ಹಿಂದಿನ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸರ್ಕಾರದ ಗಮನಕ್ಕೆ ತರಲಾಗಿತ್ತು. ಈ ವಿಚಾರವಾಗಿ ಮೂರು ದಿನಗಳ ವಿಶೇಷ ಅಧಿವೇಶನ ನಡೆಸಿ, ಜನರಿಗೆ ತೊಂದರೆಯಾಗದಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಮಾನವ-ಪ್ರಾಣಿ ಸಂಘರ್ಷ ಮಲೆನಾಡಿನ ಪ್ರಮುಖ ಸಮಸ್ಯೆಯಾಗಿದೆ. ಹಾಸನ ಜಿಲ್ಲೆಯ ಬೇಲೂರು ಭಾಗದ ಆನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲಾಗುತ್ತದೆ ಎಂಬ ಆತಂಕ ವ್ಯಕ್ತವಾದ ಹಿನ್ನೆಲೆಯಲ್ಲಿ ಅರಣ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿತ್ತು. ಭದ್ರಾ ಅಭಯಾರಣ್ಯಕ್ಕೆ ಹೊರಗಿನ ಆನೆಗಳನ್ನು ತಂದು ಬಿಡಬಾರದು ಎಂದು ಸರ್ಕಾರದ ಮೇಲೆ ಒತ್ತಡ ಹೇರಲಾಗಿದೆ. ಈ ಭಾಗದ ರೈತರ ಬದುಕು ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿಯೂ ಆನೆಗಳ ಸ್ಥಳಾಂತರಕ್ಕೆ ಅವಕಾಶ ನೀಡಬಾರದು ಎಂಬ ನಿಲುವನ್ನು ವ್ಯಕ್ತಪಡಿಸಿದ್ದೇವೆ ಎಂದರು.
ನೂತನ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣವಾಗಿರುವುದು ಮೊದಲ ಹೆಜ್ಜೆಯಷ್ಟೇ. ಇಲ್ಲಿ ಬರುವ ಗ್ರಾಮಸ್ಥರ ಕೆಲಸಗಳು ಸುಲಭವಾಗಿ ಆಗಬೇಕು. ಮನೆ ಖಾತೆ, ಚರಂಡಿ ಸ್ವಚ್ಛತೆ, ಬೀದಿದೀಪ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳಿಗೆ ಪಂಚಾಯಿತಿ ಅಧ್ಯಕ್ಷರು, ಪಿಡಿಒ ಹಾಗೂ ಕಾರ್ಯದರ್ಶಿಗಳು ತ್ವರಿತವಾಗಿ ಸ್ಪಂದಿಸ ಬೇಕು. ಜನರು ಕಚೇರಿಗೆ ಅಲೆದಾಡುವ ಪರಿಸ್ಥಿತಿ ಬರಬಾರದು. ಕಟ್ಟಡ ನಿರ್ಮಾಣದ ನಿಜವಾದ ಸಾರ್ಥಕತೆ ಜನರಿಗೆ ಉತ್ತಮ ಸೇವೆ ದೊರೆತಾಗ ಮಾತ್ರ ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಜಾನಕಿರಾಮ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವಿಜಯಕುಮಾರ್, ಮಾಜಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಗ್ರೂಪ್ಸ್ ಜನರಲ್ ಮ್ಯಾನೇಜರ್ ಸೋಮಶೇಖರ್ ಉಪಸ್ಥಿತರಿದ್ದರು.


