ಹಾಸನ, ಚಿಕ್ಕಮಗಳೂರಿನಲ್ಲಿ ಕಾಡಾನೆ ಹಾವಳಿಯಿಂದ ಸಾವು, ಪ್ರತಿಭಟನೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಪಕ್ಕದ ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಜೀವವೊಂದು ಬಲಿಯಾಗಿದೆ.
ಕೊಡಗಿನ ಪೊನ್ನಂಪೇಟೆ ತಾಲೂಕಿನ ತಿತಿಮತಿ ಸಮೀಪ ಕಾಡಾನೆ ದಾಳಿಯಿಂದ 55 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಕಾಫಿ ತೋಟದ ಮಾಲೀಕ ಕೇಶವಯ್ಯ (50ವ) ದಾಳಿಯಿಂದ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಕೊಡಗಿನ ತಿತಿಮತಿ ಸಮೀಪದ ತಾರೀಕಟ್ಟೆ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ ನಡೆಸಿದೆ. ಕೇಶವಯ್ಯ ಎಂದಿನಂತೆ ಗುರುವಾರ ಬೆಳಗ್ಗೆ ಕೂಡ ತೋಟಕ್ಕೆ ತೆರಳಿದ್ದರು. ಈ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದು ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ತೋಟಗಳಿಗೆ ತೆರಳಲು ಕಾರ್ಮಿಕರು ಹಾಗೂ ಮಾಲೀಕರಲ್ಲಿ ಆತಂಕ ಎದುರಾಗಿದೆ. ಪದೇಪದೇ ನಡೆಯುತ್ತಿರುವ ದಾಳಿಗಳ ಬಗ್ಗೆ ಸ್ಥಳೀಯರ ಆತಂಕ ಮುಂದುವರಿದಿದೆ.
ಕೇವಲ ಹತ್ತು ದಿನದ ಅಂತರದಲ್ಲಿ ಹಾಸನ ಜಿಲ್ಲೆಯಲ್ಲಿ ಇಬ್ಬರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಬ್ಬರು ಇದೀಗ ಕೊಡಗು ಜಿಲ್ಲೆಯಲ್ಲಿ ಒಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.


