November 28, 2026
;
27Mudigere1A

 

 

ಕಾಡಾನೆ ಹಾವಳಿಯಿಂದ ಶಾಶ್ವತ ಮುಕ್ತಿ ಕಲ್ಪಿಸುವುದರ ಜತೆಗೆ ಕಳೆದ ಒಂದು ವಾರದಿಂದ ಕಾಡಾನೆ ದಾಳಿಯಿಂದ ಹಾನಿಗೊಳಗಾಗಿರುವ ಬೆಳೆಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ನಾಳೆ ನವೆಂಬರ್ 28ರಿಂದ ಮೂಡಿಗೆರೆ ತಾಲ್ಲೂಕಿನ ಮಾಕೋನಹಳ್ಳಿಯಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘ ಹಸಿರು ಸೇನೆಯ ತಾಲೂಕು ಅಧ್ಯಕ್ಷ ಎಸ್.ಪಿ.ರಾಜು ತಿಳಿಸಿದರು.

ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಶನಿವಾರ ಬೇಲೂರಿನಿಂದ ಬಂದಿರುವ ಕಾಡಾನೆಗಳು ವಾಪಾಸು ತೆರಳದೆ ನಂದೀಪುರ ಮತ್ತು ಮಾಕೋನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಬೀಡುಬಿಟ್ಟಿವೆ. ಆನೆಗಳು ಸಂಚರಿಸಿದ ಪ್ರದೇಶಗಳಲ್ಲಿ ವ್ಯಾಪಕ ಬೆಳೆ ಹಾನಿಯಾಗಿದ್ದು, ಸಣ್ಣ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಡುವೆ ಮತ್ತಷ್ಟು ಬೆಳೆ ಹಾನಿ ಹಾಗೂ ಪ್ರಾಣಹಾನಿ ಸಂಭವಿಸುವ ಆತಂಕವೂ ಇದೆ. ಇಂತಹ ಗಂಭೀರ ಸಮಸ್ಯೆಗೆ ತುರ್ತು ಪರಿಹಾರ ಕಲ್ಪಿಸುವ ಬದಲು ನ.30ರಂದು ಮುಖ್ಯಮಂತ್ರಿಗಳು ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲು ಮುಂದಾಗಿದ್ದಾರೆ. ಆದರೆ ಅಲ್ಲಿಯವರೆಗೆ ಕಾಯಲು ಸಾಧ್ಯವಿಲ್ಲ. ಈಗಾಗಲೇ ಆಗಿರುವ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ಹಾಗೂ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವವರೆಗೂ ಉಪವಾಸ ಸತ್ಯಾಗ್ರಹ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.

ಮಾಕೋನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎನ್.ಅಶ್ವಥ್ ಮಾತನಾಡಿ, ಇದು ರೈತರ ಅಳಿವು-ಉಳಿವಿನ ಪ್ರಶ್ನೆಯಾಗಿದ್ದು, ಪಕ್ಷಭೇದ ಮರೆತು ಎರಡೂ ಗ್ರಾ.ಪಂ. ವ್ಯಾಪ್ತಿಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಪ.ಪಂ. ಮಾಜಿ ಅಧ್ಯಕ್ಷ ಕೆ.ವೆಂಕಟೇಶ್ ಮಾತನಾಡಿ, ಶಾಸಕರು ಸ್ಥಳಕ್ಕೆ ಬಂದು ಪ್ರತಿಭಟನೆಯಲ್ಲಿ ಭಾಗವಹಿಸಿ ಆಶ್ವಾಸನೆ ನೀಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಕೊಡಗು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳ ಉಸ್ತುವಾರಿ ಸಚಿವರು ಮತ್ತು ಅರಣ್ಯ ಸಚಿವರೊಂದಿಗೆ ಚರ್ಚಿಸಿ ನ.30ರಂದು ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಪ್ರಯತ್ನಿಸುತ್ತಿದ್ದಾರೆ. ರೈತರೊಂದಿಗೆ ಪ್ರತಿಭಟನೆಯಲ್ಲಿ ಶಾಸಕರು ಕೂಡ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಈ ಸಂದರ್ಭದಲ್ಲಿ ಕಾರ್ ಬೈಲ್  ಗ್ರಾಮದ ಕೆ.ಎಸ್. ಸುಪ್ರೀತ್, ಪ್ರಹ್ಲಾದ್ ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *